ಅನುದಾನ ನೀಡಿಕೆಯಲ್ಲಿ ತಾರತಮ್ಯ

ಚಿಂತಾಮಣಿ: ಕೇಂದ್ರ ಸರ್ಕಾರ ರಾಜ್ಯಗಳ ಅಭಿವೃದ್ಧಿಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸುದರ್ಶನ್ ಆರೋಪಿಸಿದರು.

ಸಂತೆಕಲ್ಲಹಳ್ಳಿಯಲ್ಲಿ ಶುಕ್ರವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಾರ್ವಜನಿಕ ಸಂಪರ್ಕ ಅಭಿಯಾನದಲ್ಲಿ ಮಾತನಾಡಿದರು. ಕೇಂದ್ರದಲ್ಲಿ ಆಳ್ವಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆಯಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಿದೆ. ರಾಷ್ಟ್ರದ ಆಳ್ವಿಕೆಯಲ್ಲಿರುವ ಸರ್ಕಾರ ತನ್ನ ರಾಷ್ಟ್ರದ ಎಲ್ಲ ರಾಜ್ಯಗಳನ್ನು ಸಮಾನತೆ ದೃಷ್ಟಿಯಿಂದ ಕಾಣಬೇಕು ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಮಾನವಾಗಿ ದುಡಿಯಬೇಕು. ಅದು ಬಿಟ್ಟು ಪಕ್ಷಭೇದ ಮಾಡುವುದು ಸರಿಯಲ್ಲ ಎಂದರು.

ಗ್ರಾಮೀಣ ಭಾಗದ ಬಡ ಜನರಿಗೆ ಅನುಕೂಲವಾಗಲೆಂದು ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ತಾಲೂಕು ಅಧ್ಯಕ್ಷ ಅತವುಲ್ಲಾ, ಜಿಲ್ಲಾ ಕಾರ್ಯದರ್ಶಿ ಕೋನಪಲ್ಲಿ ಕೊದಂಡ ಮತ್ತಿತರರಿದ್ದರು.