ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ

ರೋಣ: ರೋಣ ಪುರಸಭೆಯ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಾರದ ಹಿನ್ನೆಲೆಯಲ್ಲಿ ಎಲ್ಲ ಬಡಾವಣೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಎದುರಾಗಿದೆ.

ಬೀದಿ ದೀಪ, ಗಟಾರ ನಿರ್ವಹಣೆ, ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಕಾರ್ಯಕ್ಕೆ ಗ್ರಹಣ ಹಿಡಿದಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯಂದ ಪಟ್ಟಣದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಕಳೆದ ನಾಲ್ಕೈದು ತಿಂಗಳ ಹಿಂದೆ ಪುರಸಭೆ ಚುನಾವಣೆ ನಡೆದು ಸದಸ್ಯರು ಆಯ್ಕೆಯಾಗಿದ್ದಾರೆ. ಆದರೆ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪರಿಣಾಮ ಅಧಿಕಾರಿಗಳು ಆಡಿದ್ದೇ ಆಟ ಎನ್ನುವಂತಾಗಿದೆ.

ಸದ್ಯ ಪುರಸಭೆ ವ್ಯಾಪ್ತಿಯ 23 ವಾರ್ಡ್​ಗಳಲ್ಲಿ ಬೀದಿ ದೀಪ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ಪಟ್ಟಣದ ವಿವಿಧ ಬಡಾವಣೆಗಳ ನಾಗರಿಕರು ಕಗ್ಗತ್ತಲಿನಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಪಟ್ಟಣದ ನೀರಾವರಿ ಬಡಾವಣೆ ಹಿಂದಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ ಸುತ್ತಲೂ ವಿಷ ಜಂತುಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಭಯದಲ್ಲೇ ದಿನದೂಡುತ್ತಿದ್ದಾರೆ. ಅಲ್ಲದೆ, ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶರಣಯ್ಯ ಕುಲಕರ್ಣಿ ಅವರು ಪುರಸಭೆ ಮುಖ್ಯಾಧಿಕಾರಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ಪಟ್ಟಣದ ಪ್ರವಾಸಿ ಮಂದಿರದ ಮುಂದಿನ ರಸ್ತೆಯಲ್ಲಿ ಡಿವೈಡರ್​ಗಳಿವೆ. ರಸ್ತೆಯಲ್ಲಿ ವಿದ್ಯುತ್ ದೀಪ ಅಳವಡಿಸದ ಕಾರಣ ಪ್ರತಿದಿನ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದ ಪಟ್ಟಣದ ವ್ಯಕ್ತಿಯೊಬ್ಬರು ಡಿವೈಡರ್​ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕಿಮ್ಮತ್ತು: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಇತ್ತೀಚೆಗೆ ಪುರಸಭೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ‘ಪುರಸಭೆಯಲ್ಲಿ ಲಂಚದ ಹಾವಳಿ ಮೀತಿ ಮೀರಿದೆ’ ಎಂದು ಪುರಸಭೆ ಸದಸ್ಯರು ದೂರಿದ್ದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ತಕ್ಷಣವೇ ಪುರಸಭೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಸೂಚಿಸಿದ್ದರು. ಆದರೆ, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

ಬಡಾವಣೆಯಲ್ಲಿ ಬೀದಿ ದೀಪ ಅಳವಡಿಸುವಂತೆ ಮೂರು ತಿಂಗಳಿಂದ ಮುಖ್ಯಾಧಿಕಾರಿಗೆ ತಿಳಿಸುತ್ತಿದ್ದೇವೆ. ನಮ್ಮಲ್ಲಿ ಬೀದಿ ದೀಪ ತರಲು ಹಣ ಇಲ್ಲ ಎನ್ನುತ್ತಾರೆ. ಜನರ ಕಾಟ ತಾಳಲಾಗದೇ ನಾನೇ ಸ್ವಂತ ಹಣ ಖರ್ಚು ಮಾಡಿ ಬೀದಿ ದೀಪ ಅಳವಡಿಸಿದ್ದೇನೆ.

ಸಂತೋಷ ಕಡಿವಾಲ, 16ನೇ ವಾಡ್​ನ ಸದಸ್ಯ

ಪಟ್ಟಣದಲ್ಲಿ ಹೆಣ್ಣು ಮಕ್ಕಳ ಪರಿಸ್ಥಿತಿ ಹೇಳತೀರದು. ಮೂರು ತಿಂಗಳಿಂದ ಸಾರ್ವಜನಿಕ ಮಹಿಳಾ ಶೌಚಗೃಹದಲ್ಲಿ ನೀರಿಲ್ಲ. ವಿದ್ಯುತ್ ಇಲ್ಲ. ಶೌಚಗೃಹ ನಿರ್ವಹಣೆ ಮಾಡುವವರಿಗೆ ಪಗಾರ ನೀಡಿಲ್ಲ. ಇದರಿಂದಾಗಿ ಅವರು ಬರುತ್ತಿಲ್ಲ್ಲ

ರೇಣುಕಾ ಕಡಿವಾಲ, ನಿವಾಸಿ