ಊಹಾಪೋಹಕ್ಕೆ ಕಿವಿಗೊಡದಿರಿ

ಕೋಲಾರ/ನರಸಾಪುರ: ಜಿಲ್ಲೆಯಲ್ಲಿ ಅಂತರ್ಜಲಮಟ್ಟ ಹೆಚ್ಚಿಸುವ ಸಲುವಾಗಿ ಕೆ.ಸಿ.ವ್ಯಾಲಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲೆಗೆ ವರದಾನವಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಬುಧವಾರ ಜಿಲ್ಲೆಯ ಲಕ್ಷ್ಮೀಸಾಗರ ಕೆರೆಗೆ ಭೇಟಿ ನೀಡಿ ಕೆ.ಸಿ.ವ್ಯಾಲಿಯಿಂದ ಹರಿಯುತ್ತಿರುವ ನೀರಿನ ಗುಣಮಟ್ಟ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನೀರಿನ ಗುಣಮಟ್ಟ ಕುರಿತು ಸಿಎಂಗೆ ಶೀಘ್ರ ವರದಿ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಜಿಲ್ಲೆಯ ರೈತರು ಊಹಾಪೋಹಕ್ಕೆ ಕಿವಿಗೊಡಬಾರದು. ಶುದ್ಧ ನೀರು ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಲಿದೆ ಎಂದರು.

ನೀರಾವರಿ ಹೋರಾಟಗಾರರು ಕೆರೆ ಹೂಳು ತೆಗೆಸುವುದು ಸೇರಿ ಇನ್ನಿತರ ಬೇಡಿಕೆ ಈಡೇರಿಸಲು ಮನವಿ ಸಲ್ಲಿಸಿದ್ದಾರೆ. ಜಿಲ್ಲೆ ಜನರ ಹಿತದೃಷ್ಟಿಯಿಂದ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಅನುದಾನ ಬಿಡುಗಡೆ ಮಾಡಿಸುವುದಾಗಿ ತಿಳಿಸಿದರು.

ಕೆಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸುವ ವಿಚಾರ ಸಮಂಜಸವಾಗಿದೆ. ಕೆರೆಗಳಿಗೆ ಗುಣಮಟ್ಟದ ನೀರು ಹರಿಸಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ಕೋಲಾರ ಮಾತ್ರವಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಗೂ ಯೋಜನೆ ರೂಪಿಸಲಾಗಿದೆ ಎಂದರು.

ಸಣ್ಣ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳಾದ ವೆಂಕಟೇಶ್, ರವೀಂದ್ರ, ಕೃಷ್ಣಪ್ಪ, ರುದ್ರಯ್ಯ, ಕೋಲಾರ ಎಪಿಎಂಸಿ ಅಧ್ಯಕ್ಷ ವೆಂಕಟೇಶ್, ನಿವೃತ್ತ ಐಎಎಸ್ ಅಧಿಕಾರಿ ಅಮರ ನಾರಾಯಣ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವಕ್ಕಲೇರಿ ರಾಮಚಂದ್ರ, ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಮುಬಾರಕ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವಡಗೂರು ಡಿ.ಎಲ್.ನಾಗರಾಜು, ನೀರಾವರಿ ಹೋರಾಟಗಾರರಾದ ವಿ.ಕೆ.ರಾಜೇಶ್, ಕೆ.ಎನ್.ತ್ಯಾಗರಾಜು, ಎಪಿಎಂಸಿ ಪುಟ್ಟರಾಜು, ಗಲ್ ಪೇಟೆ ಕೆ.ಸಿ.ಸಂತೋಷ್, ಪ್ರಗತಿಪರ ರೈತ ನೆನುಮನಹಳ್ಳಿ ಚಂದ್ರಶೇಖರ್ ಇದ್ದರು.

ಕೆರೆ ಒತ್ತುವರಿ ತೆರವಿಗೆ ಸೂಚನೆ:ಜಿಲ್ಲೆಯಲ್ಲಿ ಕೆರೆ ಮತ್ತು ರಾಜಕಾಲುವೆ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ತೋರಿದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ಕೆಸಿ ವ್ಯಾಲಿ ಯೋಜನೆ ಕುರಿತ ವರದಿಯನ್ನು ಸಿಎಂಗೆ ನೀಡಿ ಅವರಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಸಲಾಗುವುದು. ಯೋಜನೆಯಿಂದ ಜಿಲ್ಲೆಯ 136 ಕೆರೆಗಳಿಗೆ ನೀರು ತುಂಬಿಸುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *