ಎಚ್‌ಐವಿ, ಏಡ್ಸ್ ಕುರಿತು ಅರಿವು ಮೂಡಿಸಿ

ಮಡಿಕೇರಿ: ವಿವಿಧ ಇಲಾಖೆಗಳಿಂದ ನಡೆಯುವ ಕಾರ್ಯಕ್ರಮಗಳ ಸಂದರ್ಭದಲ್ಲಿ ಎಚ್‌ಐವಿ, ಏಡ್ಸ್ ಕುರಿತು ಅರಿವು ಮೂಡಿಸಿ ಎಂದು ಪ್ರಭಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‌ಐವಿ, ಏಡ್ಸ್ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಚ್‌ಐವಿ, ಏಡ್ಸ್ ಬರುವುದಕ್ಕೂ ಮೊದಲು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಮಾಹಿತಿ ಇರಬೇಕು. ಎಚ್‌ಐವಿ, ಏಡ್ಸ್ ನಿಯಂತ್ರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡುವುದು, ಸಾಕ್ಷ್ಯಚಿತ್ರದ ಮೂಲಕ ಜಾಗೃತಿ ಮೂಡಿಸುವುದು. ಹೀಗೆ ಹಲವು ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಹಮ್ಮಿಕೊಳ್ಳುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾತನಾಡಿ, ಎಚ್‌ಐವಿ, ಏಡ್ಸ್ ನಿಯಂತ್ರಣಕ್ಕೆ ಸಂಬಂಧಿ ಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಸಹ ಕೈಜೋಡಿಸುವಂತಾಗಬೇಕು. ಎಚ್‌ಐವಿ, ಏಡ್ಸ್ ಪೀಡಿತರಿಗೆ ವಿವಿಧ ಇಲಾಖೆಗಳಿಂದ ಒದಗಿಸುವ ಸೌಲಭ್ಯಗಳು ಸಕಾಲದಲ್ಲಿ ದೊರೆಯುವಂತಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಡಿಸೆಂಬರ್ ಅಂತ್ಯದವರೆಗೆ 115 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಎಚ್‌ಐವಿ ಏಡ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರೇಡಿಯೋ ಕಾರ್ಯಕ್ರಮ, ಗೋಡೆ ಬರಹ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಆನಂದ್, ಜಿಲ್ಲಾಸ್ಪತ್ರೆಯ ಡಾ.ಮಂಜುನಾಥ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಎಸ್.ಸದಾಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧ, ಕಾರ್ಯಕ್ರಮ ಅಧಿಕಾರಿ ಮಮ್ತಾಜ್, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಐಟಿಡಿಪಿ ಇಲಾಖೆಯ ರಂಗನಾಥ್ ಇತರರು ಇದ್ದರು.