ಕಾಂಗ್ರೆಸ್ Rallyಗೆ ರಾಹುಲ್ ಗಾಂಧಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿ ಹೈದರಾಬಾದ್ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೃಹತ್ ಪ್ರಚಾರ ರ್ಯಾಲಿ 18ರಂದು ಬೆಳಗ್ಗೆ 11.30ಕ್ಕೆ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇತರ ನಾಯಕರು ಭಾಗವಹಿಸುವ ಮೂಲಕ ಲೋಕ ಸಮರಕ್ಕೆ ರಣಕಹಳೆ ಮೊಳಗಿಸಲಿದ್ದಾರೆ.

ಹೈದರಾಬಾದ್ನಿಂದ ಹೆಲಿಕಾಪ್ಟರ್ನಲ್ಲಿ ಕಲಬುರಗಿಗೆ ಆಗಮಿಸಿ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ರಾಹುಲ್ ಗಾಂಧಿ ಬೆಂಗಳೂರಿಗೆ ತೆರಳಿ ಯುವಕರು ಹಾಗೂ ವಿದ್ಯಾರ್ಥಿಗಳ ಜತೆ ಸಂವಾದ ನಡೆಸುವರು. ಅವರ ಆಗಮನದೊಂದಿಗೆ ಕಾಂಗ್ರೆಸ್ ಪ್ರಚಾರಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಸಿಎಂ ಡಾ.ಜಿ. ಪರಮೇಶ್ವರ್, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಪಕ್ಷದ ಶಾಸಕರು, ಸಂಸದರು, ಮುಖಂಡರಲ್ಲದೆ ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಕೆಲ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಐತಿಹಾಸಿಕ ರ್ಯಾಲಿ ಮೂಲಕ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕಲಬುರಗಿಯನ್ನು ವಶಪಡಿಸಿಕೊಳ್ಳುವುದು ಯಾರಿಂದಲೂ ಸಾಧ್ಯವಿಲ್ಲ ಎಂಬ ಸಂದೇಶ ರವಾನಿಸಲಾಗುವುದು ಎಂದರು.

ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್, ಜಿಪಂ ಪ್ರತಿಪಕ್ಷ ನಾಯಕ ಶಿವಾನಂದ ಪಾಟೀಲ್, ಮುಖಂಡರಾದ ಸಿ.ಬಿ.ಪಾಟೀಲ್ ಓಕಳಿ, ತಿಪ್ಪಣ್ಣಪ್ಪ ಕಮಕನೂರ, ಅರುಣಕುಮಾರ ಪಾಟೀಲ್ ಕೊಡಲಹಂಗರಗಾ, ರಾಜಗೋಪಾಲರಡ್ಡಿ, ಈರಣ್ಣ ಝಳಕಿ, ಡಾ.ಕಿರಣ ದೇಶಮುಖ, ಪ್ರವೀಣ ಪಾಟೀಲ್ ಹರವಾಳ ಇತರರಿದ್ದರು.

ಇಂದು ಸಂಜೆ ಖಂಡ್ರೆ ಸಭೆ

ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಶನಿವಾರ ಸಂಜೆ 5ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಪೂರ್ವಸಿದ್ಧತಾ ಸಭೆ ನಡೆಯಲಿದೆ. ಜಿಲ್ಲೆಯ ಎಲ್ಲ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಕೋರಿದ್ದಾರೆ.