ಕುಡಿವ ನೀರು ಪೂರೈಕೆಗೆ ಪಟ್ಟು

ಗೌರಿಬಿದನೂರು: ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಒತ್ತಾಯಿಸಿ ಪುಟ್ಟಾಪುರ್ಲಹಳ್ಳಿ ಗ್ರಾಮಸ್ಥರು ಖಾಲಿ ಬಿಂದಿಗೆಯೊಂದಿಗೆ ನಗರಸಭೆ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮದ ಲಕ್ಷ್ಮಮ್ಮ ಮಾತನಾಡಿ, ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಗ್ರಾಮವನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದಕ್ಕಿಂತ ಮುಂಚೆ ನೀರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಗ್ರಾಪಂ ನೀರು ಒದಗಿಸುತ್ತಿತ್ತು. ಆದರೆ, ಇದೀಗ ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಕುರಿತು ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, 500ರಿಂದ 600ರೂ. ನೀಡಿ ಟ್ಯಾಂಕರ್ ನೀರು ಹಾಕಿಸಿಕೊಳ್ಳಲು ಸಾಧ್ಯವಿಲ್ಲ. ಕುಡಿಯುವ ನೀರು ಪೂರೈಕೆ ಮಾಡಿ ಎಂದು ಕೇಳಿದರೆ ಕೊಳವೆಬಾವಿಯಲ್ಲಿ ನೀರಿಲ್ಲ. ಮಳೆ ಬಂದರೆ ಮಾತ್ರ ನೀರು ಎಂದು ಹಾರಿಕೆ ಉತ್ತರ ನೀಡುತ್ತಾರೆ ಎಂದರು.

ಕೊಳವೆಬಾವಿಗಳಲ್ಲಿ ನೀರು ಬತ್ತಿ ಹೋಗಿದೆ. ಕೆಲ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿರುವುದರಿಂದ ನೀರಿನ ಸಮಸ್ಯೆ ಉಲ್ಬಣಿಸಿದೆ. ಈ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದಾಗಿ ನಗರಸಭೆ ಸದಸ್ಯ ಎಂ.ನರಸಿಂಹಮೂರ್ತಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು. ಗ್ರಾಮದ ಸರಸ್ವತಮ್ಮ, ಗೌರಮ್ಮ, ಪದ್ಮಾವತಮ್ಮ, ಶಿವಮ್ಮ ಮತ್ತಿತರರಿದ್ದರು.

 

Leave a Reply

Your email address will not be published. Required fields are marked *