ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್

ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ (ಪಿಎಂಎಫ್​ಬಿವೈ) ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ರೈತರಿಗೆ 2016ನೇ ಸಾಲಿನ ಬೆಳೆ ನಷ್ಟ ಪರಿಹಾರದ ಹಣ ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಅಖಂಡ ಕರ್ನಾಟಕ ರೈತ ಸಂಘದ ಯಾದಗಿರಿ ಜಿಲ್ಲಾ ಸಂಚಾಲಕ ಮಲ್ಲನಗೌಡ ಪರಿವಾನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್​ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೃಷಿ ಇಲಾಖೆ ಕಾರ್ಯದರ್ಶಿ, ಯಾದಗಿರಿ ಜಿಲ್ಲಾಧಿಕಾರಿ ಮತ್ತು ಶಹಾಪುರ ತಹಸೀಲ್ದಾರ್ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

ಶಹಾಪುರ ತಾಲೂಕಿನಲ್ಲಿ 2016ರಲ್ಲಿ ಖಾರಿಫ್ ಬೆಳೆ ನಷ್ಟ ಉಂಟಾದ ಕಾರಣ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ತಾಲೂಕು ರೈತರಿಗೆ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿತ್ತು. ಪರಿಹಾರಕ್ಕಾಗಿ ರೈತರು ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನೂ ಮಾಡಿದ್ದರು. ಇಷ್ಟಾದರೂ ಪರಿಹಾರ ಸಿಗದ ಕಾರಣ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡರು. ಸರ್ಕಾರಗಳು ಪರಿಹಾರ ಹಣ ಬಿಡುಗಡೆ ಮಾಡಲು ಹಾಗೂ ರೈತರ ಆತ್ಮಹತ್ಯೆ ತಡೆಯಲು ವಿಫಲವಾಗಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಗೂಡ್ಸ್ ಗಾಡಿಗಳಲ್ಲಿ ಪ್ರಯಾಣಿಕರ ಸಾಗಣೆ ವಿಚಾರ ಪ್ರಶ್ನಿಸಿ ಪಿಐಎಲ್

ಬೆಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಕಾರ್ವಿುಕರು, ಮಕ್ಕಳು ಹಾಗೂ ಇತರ ಪ್ರಯಾಣಿಕರನ್ನು ಕೊಂಡೊಯ್ಯು ವುದನ್ನು ತಡೆಗಟ್ಟಲು ಸೂಕ್ತಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್​ಎಲ್​ಎಸ್​ಎ) ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಾರಿಗೆ ಆಯುಕ್ತರು, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಕಾರ್ವಿುಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರು ಹಾಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ ಪೀಠ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.