ಕೈ ಕಾರ್ಯಕರ್ತರ ಪ್ರತಿಭಟನೆ

ಹಾವೇರಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂಬ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಜೆಪಿ ಸರ್ಕಲ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಸಂಚರಿಸಿ ಬಿಜೆಪಿ ನಾಯಕರ ವಿರುದ್ಧ ಘೊಷಣೆ ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ಭೋಪಾಲ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧಿ್ವ ಪ್ರಜ್ಞಾಸಿಂಗ್ ಠಾಕೂರ್ ಅವರು ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯ ಪರ ರಾಜ್ಯದ ಬಿಜೆಪಿಯ ಸಂಸದರಾದ ಅನಂತಕುಮಾರ ಹೆಗಡೆ, ನಳಿನ್​ಕುಮಾರ ಕಟೀಲ್ ಸಹ ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ನೀಡಿರುವ ಹೇಳಿಕೆಗೆ ಬಿಜೆಪಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದ ಗಾಂಧಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಅವರ ಢೋಂಗಿ ದೇಶಪ್ರೇಮವನ್ನು ತೋರಿಸುತ್ತದೆ. ರಾಷ್ಟ್ರದ ಜನತೆ ಪೂಜಿಸುವ ಮಹಾತ್ಮ ಗಾಂಧಿ ಅವರಿಗೆ ಬಿಜೆಪಿಯು ಅವಮಾನ ಮಾಡಿದಂತಾಗಿದೆ. ದೇಶಭಕ್ತಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ನಿಜವಾದ ಬಣ್ಣ ಬಯಲಾಗಿದೆ. ಗಾಂಧಿ ಕೊಂದ ಗೋಡ್ಸೆ ಬಿಜೆಪಿಯವರಿಗೆ ದೇಶಭಕ್ತನಂತೆ ಕಾಣುತ್ತಿದ್ದಾನೆ. ದೇಶದ ಇತಿಹಾಸವನ್ನೇ ಬಿಜೆಪಿ ತಿರುಚಲು ಹೊರಟಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಸ್​ಎಫ್​ಎನ್ ಗಾಜಿಗೌಡ್ರ, ತಾಲೂಕಾಧ್ಯಕ್ಷ ಎಂ.ಎಂ. ಮೈದೂರ, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ, ಜಿ.ಪಂ. ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಮಮತಾ ಜಾಬಿನ್ ಇತರರು ಇದ್ದರು.