ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಜ.19 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದರು.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬೇರೆ ಜಿಲ್ಲೆಯಿಂದ ವಲಸೆ ಬಂದಿರುವ ಮಕ್ಕಳು ಸೇರಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಯಾರೂ ದೂರ ಉಳಿಯದಂತೆ ನೋಡಿಕೊಳ್ಳಬೇಕು ಎಂದರು.
ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಬಿ.ಎಂ ಯೋಗೇಶ್ ಗೌಡ ಮಾತನಾಡಿ, ಜ.19 ರಂದು ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು ಮೊದಲನೇ ದಿನ ಪೋಲಿಯೋ ಬೂತ್ ಗಳಲ್ಲಿ, ಬಳಿಕ ಎರಡರಿಂದ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ ಎಂದು ಹೇಳಿದರು.
ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಆ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿದ್ದು ವಲಸಿಗರ ಮೂಲಕ ಭಾರತಕ್ಕೂ ಹರಡುವ ಸಾಧ್ಯತೆ ಇದೆ. ಇದಕ್ಕೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಎಎ್ಸಿ ಸರ್ವೇಕ್ಷಣೆ ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.ಸಭೆಯಲ್ಲಿ ಜಿಪಂ ಸಿಇಒ ೌಜಿಯಾ ತರನ್ನುಮ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಅನಿಲ್ ಕುಮಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಚನ್ನಕೇಶವರೆಡ್ಡಿ ಮತ್ತಿತರರು ಇದ್ದರು.
ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮ: ಜಿಲ್ಲಾದ್ಯಂತ ಜ.30 ರಿಂದ ೆ.13 ರವರೆಗೂ ಸ್ಪರ್ಶ ಕುಷ್ಠ ಅರಿವು ಆಂದೋಲನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಾಂಧೀಜಿಯವರು ಭಾರತವನ್ನು ಕುಷ್ಠ ಮುಕ್ತ ದೇಶವನ್ನಾಗಿಸಬೇಕೆಂಬ ಕನಸು ಕಂಡಿದ್ದರು. ಇದನ್ನು ನನಸಾಗಿಸಬೇಕಿದೆ ಎಂದರು.
ತಾಲೂಕು ಮಟ್ಟದಲ್ಲಿ ಜ.20 ರಿಂದ 25 ರವರೆಗೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಸಿ, ಕ್ಷೇತ್ರ ಮಟ್ಟದಲ್ಲಿ ಕುಷ್ಠರೋಗದ ಬಗ್ಗೆ ಪರಿಣಾಮಕಾರಿ ಕಾರ್ಯಕ್ರಮಗಳ ಆಯೋಜನೆಯ ಸಿದ್ಧತೆ ಬಗ್ಗೆ ಚರ್ಚಿಸಬೇಕು. ಪ್ರತಿ ಗ್ರಾಮದಲ್ಲಿ ಚುನಾಯಿತ ಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ ಯಲ್ಲಾ ರಮೇಶ್ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಕುಷ್ಠ ರೋಗಕ್ಕೆ ಸಂಬಂಧಿಸಿದಂತೆ 67 ಪ್ರಕರಣಗಳನ್ನು ಪತ್ತೆ ಹಚ್ಚಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.