
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಮಳೆ ಬುಧವಾರ ಸಂಜೆ ಬಳಿಕ ಚುರುಕುಗೊಂಡಿದೆ. ಜೂ. 13 ಮತ್ತು 14ರಂದು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.
ಜೂ. 13 ಮತ್ತು 14 ಸೇರಿದಂತೆ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗುವವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಗಳಿಗೆ ಮತ್ತು ತಗ್ಗು ಪ್ರದೇಶಗಳಿಗೆ ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.
ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ, ಕಟ್ಟೆಗಳಿಗೆ ತೆರಳಬಾರದು. ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಮತ್ತೆ ಆರಂಭಗೊಂಡಿದೆ. ಸಂಜೆ 4 ಗಂಟೆ ವೇಳೆಗೆ ಆರಂಭಗೊಂಡ ಸಾಧಾರಣ ಮಳೆ ನಿಧಾನವಾಗಿ ಬಿರುಸು ಪಡೆದುಕೊಳ್ಳುತ್ತಿದೆ. ಬೆಳಗ್ಗಿನಿಂದ ಬಿಸಿಲಿನ ವಾತಾವರಣ ಇರುವ ಹಿನ್ನೆಲೆಯಲ್ಲಿ ಮನೆಯಿಂದ ರೈನ್ ಕೋಟ್, ಛತ್ರಿ ತಾರದೆ ಹೊರಬಂದಿದ್ದ ಸಾರ್ವಜನಿಕರು ಸಂಜೆ ಏಕಾಏಕಿ ಮಳೆ ಆರಂಭಗೊಂಡಿದ್ದರಿಂದಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶದಲ್ಲಿಯೂ ಮಳೆ ಆರಂಭಗೊಂಡಿದೆ. ಆದರೆ ಮಲೆನಾಡು ಭಾಗದಲ್ಲಿ ಮಾತ್ರ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.