ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜ.8ರಂದು ಕರೆ ನೀಡಿರುವ ಗ್ರಾಮೀಣ ಕರ್ನಾಟಕ ಬಂದ್‌ಗೆ ಸಹಕರಿಸುವಂತೆ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಮನವಿ ಮಾಡಿದರು.
ರೈತರು, ಕೃಷಿ ಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಿಗೊಳಿಸಲು ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು. ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾಯ್ದೆ ಜಾರಿಯಾಗಬೇಕು. ಭೂ ಸುಧಾರಣ ಕಾಯ್ದೆಯ ತಿದ್ದುಪಡಿ ಕೈಬಿಡಬೇಕು. ಸಂವಿಧಾನ ವಿರೋಧಿ ಸಿಎಎ, ಎನ್‌ಆರ್‌ಸಿ, ಎನ್‌ಆರ್‌ಪಿ ತಿದ್ದುಪಡಿ ಹಿಂಪಡೆಯಬೇಕೆಂದು ಪ್ರತಿಭಟನೆ ಮೂಲಕ ಒತ್ತಾಯಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಮಾರು 200ಕ್ಕೂ ಹೆಚ್ಚಿನ ರೈತ ಕೂಲಿಕಾರರ ಸಂಘಟನೆ ಒಳಗೊಂಡು ರಚನೆಯಾಗಿರುವ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್‌ಗೆ ಸಹಕರಿಸಬೇಕು ಎಂದರು.
ರಾಜ್ಯ ಸರ್ಕಾರ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಮೂಲಕ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಲಪಟಾಯಿಸಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಆದ್ದರಿಂದ ಖಾಸಗೀಕರಣ ಮಾಡುವ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಲತಾ ಶಂಕರ್, ಟಿ.ಎಲ್.ಕೃಷ್ಣೇಗೌಡ, ಯಶವಂತ್ ಇದ್ದರು.