ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸಿ

ಕುಮಟಾ: ಪಟ್ಟಣದ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಜನರಿಗೆ ಇನ್ನಷ್ಟು ಉತ್ತಮ ವೈದ್ಯಕೀಯ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ವೈದ್ಯಾಧಿಕಾರಿ ಡಾ. ಶ್ರೀನಿವಾಸ ನಾಯಕ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ತಾಲೂಕು ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿದೆ. ಮೂಲಸೌಕರ್ಯಗಳಿಲ್ಲ. ಶವಾಗಾರವು ತೀರಾ ಕೆಟ್ಟ ಸ್ಥಿತಿಯಲ್ಲಿದೆ. ಅಪಘಾತ ಮತ್ತಿತರ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡಲು ಮೂಲಸೌಕರ್ಯಗಳಿಲ್ಲ. ಇಲ್ಲಿರುವ ವೈದ್ಯರು ಕೈಲಾದಷ್ಟು ಉತ್ತಮ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಹಲವಾರು ವರ್ಷಗಳಿಂದ ಟ್ರಾಮಾ ಸೆಂಟರ್​ಗಾಗಿ ಬೇಡಿಕೆಯಿದೆ. ಆದರೆ, ಈವರೆಗೂ ಕೈಗೂಡಿಲ್ಲ. ಸಂಬಂಧಿಸಿದ ಅಧಿಕಾರಿಗಳು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಬೇಕಾದ ಕ್ರಮವನ್ನು ಕೂಡಲೇ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕರವೇಯಿಂದ ತೀವ್ರ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕರವೇ ಪದಾಧಿಕಾರಿಗಳು ಆಸ್ಪತ್ರೆಯ ಎದುರು ಕುಳಿತು ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ವಿಫಲವಾದ ಆರೋಗ್ಯ ಇಲಾಖೆ ವಿರುದ್ಧ ಘೊಷಣೆಗಳನ್ನು ಕೂಗಿದರು.

ಮನವಿ ಸ್ವೀಕರಿಸಿದ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶ್ರೀನಿವಾಸ ನಾಯಕ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಯ ಕೊರತೆಯಿದೆ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಜನರ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ. ಆಜ್ಞಾ ನಾಯಕ, ಸಿಪಿಐ ಸಂತೋಷ ಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ಪದಾಧಿಕಾರಿಗಳು ಇದ್ದರು.