ಗಾಜಿನಮನೆಯಲ್ಲಿ ಘಮ, ಘಮ ಘಮಾಡಿಸುತ್ತಿವೆ ಬಗೆ ಬಗೆಯ ಮಾವು, ದಾವಣಗೆರೆಯಲ್ಲಿ ಹಣ್ಣುಗಳ ರಾಜನ ಮೇಳ

ದಾವಣಗೆರೆ: ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 17ರಿಂದ 23ರವರೆಗೆ ಗಾಜಿನಮನೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ, ನೈಸರ್ಗಿಕವಾಗಿ ಮಾಗಿಸಿದ ಮಾವಿನಹಣ್ಣುಗಳನ್ನು ಯೋಗ್ಯ ಬೆಲೆಗೆ ತಲುಪಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇಳದಲ್ಲಿ ಪಾಲ್ಗೊಳ್ಳಲು ಈಗಾಗಲೇ 25ಕ್ಕೂ ಹೆಚ್ಚು ರೈತರು ಹೆಸರು ನೋಂದಾಯಿಸಿದ್ದಾರೆ. 30 ಮಳಿಗೆಗಳನ್ನು ಹಾಕಲಾಗಿದೆ. ದಾವಣಗೆರೆ ಜಿಲ್ಲೆಯ ರೈತರ ಜತೆಗೆ ರಾಮನಗರ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳಿಂದಲೂ ಮಾವು ಬೆಳೆಗಾರರು ಭಾಗವಹಿಸಲಿರುವುದಾಗಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 3,500 ಹೆಕ್ಟೇರ್​ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. 30 ಸಾವಿರ ಟನ್ ಇಳುವರಿ ಬರುತ್ತಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೋಬಳಿಯ ಬಹುಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ಬಾದಾಮಿ, ರಸಪುರಿ, ಮಲ್ಲಿಕಾ, ಮಲಗೋವಾ, ತೋತಾಪುರಿ, ದಶಹರಿ, ಕೇಸರ್, ಬೇನಿಶಾನ್, ಸಿಂಧೂರ ತಳಿಗಳನ್ನು ಬೆಳೆಯಲಾಗುತ್ತಿದೆ ಎಂದು ವಿವರಿಸಿದರು.

ಕ್ಯಾಲ್ಸಿಯಂ ಕಾರ್ಬೈಡ್‌ನಂಥ ಹಾನಿಕಾರಕ ರಾಸಾಯನಿಕಗಳನ್ನು ಬಳಸದಿರುವ ಮತ್ತು ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನೇ ಮಾರಾಟಕ್ಕೆ ಇಡಲಾಗುವುದು. ಮಧ್ಯವರ್ತಿಗಳು ಇರುವುದಿಲ್ಲ. ರಾಜ್ಯದಲ್ಲಿ ಬೆಳೆಯುವ 50ರಿಂದ 60 ಪ್ರಮುಖ ಮಾವಿನ ತಳಿಗಳನ್ನು ಪ್ರದರ್ಶಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *