ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಸರಳಾಚರಣೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯಿಂದ ಸೋಮವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಪ್ರಯುಕ್ತ ರಾಜ್ಯ ಸರ್ಕಾರವು ಸೋಮವಾರದಿಂದಲೆ ಜಾರಿಗೆ ಬರುವಂತೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಜಯಂತಿ ಸರಳವಾಗಿ ಆಚರಿಸಲಾಯಿತು. ಒಂದು ನಿಮಿಷ ಮೌನಾಚರಣೆಯೂ ಮಾಡಲಾಯಿತು.

ತೊನಸನಹಳ್ಳಿ ಎಸ್. ಗ್ರಾಮದ ಅಲ್ಲಮಪ್ರಭು ಪೀಠಾಧಿಪತಿ ಪೂಜ್ಯ ಮಲ್ಲಣ್ಣಪ್ಪ ಮಹಾಸ್ವಾಮಿ ಅವರ ಸಾನ್ನಿಧ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಶಾಸಕರಾದ ದತ್ತಾತ್ರೆಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೋಲಿ ಸಮಾಜದ ಮುಖಂಡ ರಾಜಗೋಪಾಲ ರೆಡ್ಡಿ, ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಚಪ್ಪ, ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ನಿರ್ದೇಶಕ ಡಾ.ಎಚ್.ಟಿ ಪೋತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಅನೇಕ ಮುಖಂಡರು, ಸಮಾಜದವರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆಯೂ ಜಾನಪದ ಕಲಾ ತಂಡದೊಂದಿಗೆ ನೆಹರು ಗಂಜಿನ ನಗರೇಶ್ವರ ಶಾಲೆಯಿಂದ ಡಾ.ಎಸ್.ಎಂ.ಪಂಡಿತ ರಂಗಮಂದಿರವರೆಗೆ ಜರುಗಿತು.