ನಿಯಮ ಮೀರಿದರೆ ಮಾನ್ಯತೆ ರದ್ದು

ಶಿವರಾಜ ಎಂ. ಬೆಂಗಳೂರು

ನಿಯಮ ಗಾಳಿಗೆ ತೂರುವ ಶಿಕ್ಷಣ ಸಂಸ್ಥೆಗಳಿಗೆ ಖಡಕ್ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ, ಅಂಥ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ನಿರ್ದಾಕ್ಷಿಣ್ಯವಾಗಿ ರದ್ದುಗೊಳಿಸಲು ಮುಂದಾಗಿದೆ.

ಮೇ 28ರ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದ್ದು, ನಿಯಮ ಮೀರಿದರೆ ಮಾನ್ಯತೆ ರದ್ದುಗೊಳಿಸುವ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿನ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಹೋಲಿಸಿದರೆ ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆ ಕಡೆಗಣಿಸಿವೆ ಎಂಬ ದೂರು ವ್ಯಕ್ತವಾಗಿದೆ. ಸರಕು ಸಾಗಣೆ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುವುದು, ನಿರ್ವಹಣೆ ಇಲ್ಲದ ಶಾಲಾ ವಾಹನ ಬಳಕೆ, ಶಾಲಾ ವಾಹನ ವ್ಯವಸ್ಥೆ ಬಗ್ಗೆ ಶಿಕ್ಷಣ ಇಲಾಖೆ ರೂಪಿಸಿರುವ ನಿಯಮ ಪಾಲಿಸದಿರುವುದು, ಅಗತ್ಯಕ್ಕಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ ತುಂಬುವುದು ಕಂಡುಬರುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಯಾವುದೇ ಅನಾಹುತಕ್ಕೆ ಆ ಸಂಸ್ಥೆ ಮುಖ್ಯಶಿಕ್ಷಕ ಹಾಗೂ ಆಡಳಿತ ಮಂಡಳಿಯನ್ನು ನೇರ ಹೊಣೆ ಮಾಡಿ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಮುಖ್ಯ ಶಿಕ್ಷಕರ ಸಭೆ: ಲಗೇಜು ಆಟೋ, ಟೆಂಪೋ ಸೇರಿ ಯಾವುದೇ ಸರಕು ಸಾಗಣೆ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಅನುಮತಿ ನೀಡಿದ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕರೀಗೌಡ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳ ಮುಖ್ಯ ಶಿಕ್ಷಕರ ಸಭೆ ಆಯೋಜನೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಾಗಲೇ ನೋಟಿಸ್ ನೀಡಿದ್ದಾರೆ. ನಿಯಮ ಮೀರಿದರೆ ಪ್ರಾಥಮಿಕವಾಗಿ ನೋಟಿಸ್ ನೀಡಲಾಗುವುದು, ಅದೇ ಪುನಾವರ್ತನೆಯಾದರೆ ಮಾನ್ಯತೆ ರದ್ದುಗೊಳಿಸುವ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ಪತ್ರ: ಜಿಲ್ಲೆಯಲ್ಲಿರುವ 252 ಖಾಸಗಿ ಶಾಲೆಗಳ ಆಡಳಿತ ಮಂಡಳಿ ಹಾಗೂ 54 ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಡಿಸಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಪತ್ರದ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರಲ್ಲಿ ಮನವಿ: ಸುರಕ್ಷತೆ ಇಲ್ಲದೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳು ಕಂಡುಬಂದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಕೂಡಲೇ ಮಾಹಿತಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಶಿಕ್ಷಣ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಕ್ಕಳ ಹಿತ ಕಾಪಾಡುವುದು ಎಲ್ಲರ ಕರ್ತವ್ಯ. ಕೇವಲ ಹಣದಾಸೆಗಾಗಿ ನಿಯಮ ಗಾಳಿಗೆ ತೂರುವ ಪ್ರಯತ್ನ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಕರೆದೊಯ್ಯುವ ವಾಹನ ವ್ಯವಸ್ಥೆ ಬಗ್ಗೆ ಶಿಕ್ಷಣ ಸಂಸ್ಥೆಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ. ಇಂಥ ದೃಶ್ಯ ಕಂಡುಬಂದರೆ ಮೊದಲಿಗೆ ನೋಟಿಸ್ ನೀಡಲಾಗುವುದು. ಆದರೂ ಪುನಾರಾವರ್ತನೆಯಾದರ ಮಾನ್ಯತೆ ರದ್ದುಗೊಳಿಸಲು ಚಿಂತನೆ ನಡೆಸಲಾಗಿದೆ.

| ಕೃಷ್ಣಮೂರ್ತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ, ಬೆಂಗಳೂರು ಗ್ರಾಮಾಂತರ

Leave a Reply

Your email address will not be published. Required fields are marked *