ಬೆಳಗಾವಿ: ಕ್ರೈಸ್ತರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ರೈಸ್ತ ಪ್ರಾರ್ಥನಾ ಮಂದಿರಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟಿಸಿದರು.

ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ವಿವಿಧೆಡೆ ಕ್ರೈಸ್ತರು ಪ್ರಾರ್ಥನೆ ಮಾಡುವಾಗ, ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದು ಅಡ್ಡಿಪಡಿಸುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ.
ಈಚೆಗೆ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ ಅವರು, ಕ್ರೈಸ್ತ ಧರ್ಮದ ವಿರುದ್ಧ ಆಧಾರ ರಹಿತವಾಗಿ ಆರೋಪಿಸಿದ್ದಾರೆ. ಸರ್ಕಾರ ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಿಚ್‌ಮ್ಯಾನ್‌ರಿಕ್ಕಿ ನವಗ್ರಹ, ಯುವ ಘಟಕದ ಅಧ್ಯಕ್ಷ ಪ್ರಭಾಕರ ಹುಲಿಕವಿ, ಉಪಾಧ್ಯಕ್ಷ ಶಕೀಲ್ ಧಾರವಾಡಕರ, ಪ್ರಧಾನ ಕಾರ್ಯದರ್ಶಿ ಸಂದೀಪ ಅನಗೋಳ, ಎಸ್.ಪ್ರಜ್ವಲಸ್ವಾಮಿ ಇತರರಿದ್ದರು.