ಬಿಳಿಗಿರಿರಂಗನಬೆಟ್ಟದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಸಂಸದ

ಯಳಂದೂರು: ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಬಿಳಿಗಿರಿರಂಗನಾಥಸ್ವಾಮಿ ದೇಗುಲಕ್ಕೆ ಸಂಸದ ಆರ್.ಧ್ರುವನಾರಾಯಣ ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಭೇಟಿ ನೀಡಿ ಮನೆ ದೇವರಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇಗುಲದ ಅರ್ಚಕರು ದೇಗುಲ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಬಿಳಿಗಿರಿರಂಗನಬೆಟ್ಟದ ಬಾಲಾಲಯದಲ್ಲಿ ಪ್ರತಿಷ್ಠಾಪಿಸಿರುವ ಶ್ರೀರಂಗನಾಥಸ್ವಾಮಿ ಹಾಗೂ ಅಲಮೇಲು ರಂಗನಾಯಕಿ ಅಮ್ಮರವರ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸಾರ್ವಜನಿಕ ವಲಯದಲ್ಲೂ ಈ ಮಾತು ಜನಜನಿತವಾಗಿದೆ. ಬಿಳಿಗಿರಿರಂಗನಾಥಸ್ವಾಮಿ ನಮ್ಮ ಮನೆ ದೇವರಾಗಿದ್ದು ನಾಮಪತ್ರ ಸಲ್ಲಿಕೆಗೂ ಮುಂಚೆ ಪ್ರತಿ ಚುನಾವಣೆಯಲ್ಲೂ ಇಲ್ಲಿ ಪೂಜೆ ಮಾಡಿಸುವ ವಾಡಿಕೆ ಇಟ್ಟುಕೊಂಡಿದ್ದೇನೆ. ಈಗ ಪೂಜೆ ಸಲ್ಲಿಸಿದ್ದೇನೆ. ದೇವರ ಹಾಗೂ ಜನರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ಗೆಲುವು ನನ್ನದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಲೋಕಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಹಲವು ಬಾರಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಮತದಾರರನ್ನು ಭೇಟಿಯಾಗಿದ್ದೇನೆ. ನನ್ನ 2 ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದೇನೆ. ರಸ್ತೆ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿದೆ. ಮತದಾರರು ನಾನು ಮಾಡಿರುವ ಕೆಲಸಕ್ಕೆ ಕೂಲಿ ಕೊಡಬೇಕೆಂದು ಬಿನ್ನಹಿಸುತ್ತಿದ್ದೇನೆ. ನನ್ನ ಬೆಂಬಲಕ್ಕೆ ಪಕ್ಷದ ಎಲ್ಲ ಧುರೀಣರು, ಸಚಿವರು, ಹಾಲಿ, ಮಾಜಿ ಶಾಸಕರು, ಜಿಲ್ಲಾ, ತಾಲೂಕು, ನಗರ, ಪುರಸಭಾ, ಪಟ್ಟಣ, ಗ್ರಾಮ ಪಂಚಾಯಿತಿ ಸದಸ್ಯರು, ದೊಡ್ಡ ಕಾರ್ಯಕರ್ತರ ಪಡೆ ಹಾಗೂ ಮತದಾರರು ನಿಂತಿದ್ದಾರೆ ಎಂದರು.
ಮಾಜಿ ಶಾಸಕ ಎಸ್.ಬಾಲರಾಜು ಅನೇಕರು ಈ ಸಂದರ್ಭದಲ್ಲಿ ಇದ್ದರು.