ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

ಪಾಂಡವಪುರ: ಭತ್ತ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ಕೆಲಕಾಲ ಸಂಚಾರ ತಡೆ ನಡೆಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಲ್ಲಿಂದ ತೆರಳಿ ತಾಲೂಕು ಕಚೇರಿ ಮುತ್ತಿಗೆ ಹಾಕಿದರು.

ಭತ್ತದ ಕಟಾವು ಕಾರ್ಯ ಮುಗಿಯುತ್ತಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆಯಲು ಮನಸು ಮಾಡಿಲ್ಲ. ರೈತರ ಬೆವರಿನ ಫಲವನ್ನು ದಲ್ಲಾಳಿಗಳು ಅಲ್ಪ ಕಾಸಿಗೆ ಕೊಂಡೊಯ್ಯುತ್ತಿದ್ದಾರೆ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣ ಸರ್ಕಾರ ಖರೀದಿ ಕೇಂದ್ರ ತೆರೆದು ರೈತರನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹೈನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿದ್ದ ರೈತಾಪಿ ವರ್ಗದವರಿಗೆ ಹಾಲಿನ ದರ ಇಳಿಸುವ ಮೂಲಕ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ತಕ್ಷಣ ಹಾಲಿನ ದರ ಹೇರಿಕೆ ಮಾಡಿ ರೈತರ ಹಿತ ಕಾಯಬೇಕು. ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭವಾಗದೆ ಇಲ್ಲಿನ ಕಾರ್ಮಿಕರ ಬದುಕು ಬೀದಿಪಾಲಾಗುತ್ತಿದೆ. ಕೂಡಲೇ ಸರ್ಕಾರ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ನಂತರ ತಾಲೂಕು ಕಚೇರಿಯ ಕಂದಾಯ ಶಿರಸ್ತೇದಾರ್ ನಾಗಲಿಂಗಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ಯುವ ಮೋರ್ಚಾ ಅಧ್ಯಕ್ಷ ಸಂದೇಶ್, ಎಸ್ಸಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ನಾಯಕ, ನೀಲನಹಳ್ಳಿ ಧನಂಜಯ ಸೇರಿದಂತೆ ಇತರರು ಇದ್ದರು.