ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಎಸ್ಸಿ ದೌರ್ಜನ್ಯ ಹೆಚ್ಚಳ

ಮೈಸೂರು: ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿ ದೌರ್ಜನ್ಯ ಪ್ರಕರಣಗಳು ಇಳಿಕೆಯಾಗಿದ್ದರೆ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಮಾತ್ರ ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್.ಮುರುಗನ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮೈಸೂರು ವಿಭಾಗ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಿಶಿಷ್ಟ ಜಾತಿ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಪ್ರಕರಣಗಳ ಪಟ್ಟಿಯನ್ನು ಪರಿಶೀಲನೆ ಮಾಡಿದ್ದು, ಅದರಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಜತೆಗೆ, ಮೈಸೂರು ವಿಭಾಗದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ತುಸು ಕಡಿಮೆಯಾಗಿವೆ. ಆದರೆ, ಹಾಸನ ಜಿಲ್ಲೆಯಲ್ಲಿ ಮಾತ್ರ 260 ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಆ ಜಿಲ್ಲೆಯ ಎಸ್‌ಪಿಗೆ ನಿರ್ದೇಶಿಸಲಾಗಿದೆ ಎಂದರು.
2016ರಿಂದ 2018ರವರೆಗಿನ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ನಿಂದನೆ, ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳು ಸೇರಿ ಒಟ್ಟು 576 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಈ ಜಿಲ್ಲೆಗಳಲ್ಲಿ ಮೂರು ವರ್ಷಗಳಲ್ಲಿ ಒಟ್ಟು 76 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಮೈಸೂರು ಜಿಲ್ಲೆಯಲ್ಲಿ ಹೆಚ್ಚು (28) ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2ನೇ ಸ್ಥಾನದಲ್ಲಿ ಮಂಡ್ಯ ಜಿಲ್ಲೆ (19) ಇದೆ. ಜತೆಗೆ, ನಾಲ್ಕು ಜಿಲ್ಲೆಗಳಿಂದ ಪರಿಶಿಷ್ಟ ಜಾತಿಯ 23 ಜನರು ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲೇ ಹೆಚ್ಚು (9) ಕೊಲೆ ಪ್ರಕರಣಗಳು ನಡೆದಿವೆ. ಮಂಡ್ಯದಲ್ಲಿ 7, ಕೊಡಗಿನಲ್ಲಿ 3 ಮತ್ತು ಚಾಮರಾಜನಗರದಲ್ಲಿ 1 ಕೊಲೆ ಪ್ರಕರಣಗಳು ನಡೆದಿವೆ ಎಂದು ಮಾಹಿತಿ ನೀಡಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಎಸ್‌ಸಿ ಸಮುದಾಯಕ್ಕೆ ಸಮರ್ಪಕವಾಗಿ ತಲುಪಿಸಬೇಕು. ಮಂಡ್ಯ ಜಿಲ್ಲೆಯಲ್ಲಿ ಕ್ವಾರಿಯಲ್ಲಿ ಕೆಲಸ ನಿರ್ವಹಿಸುವ 63 ಕುಟುಂಬಗಳಿಗೆ ಪುನರ್ವಸತಿಗೆ ಆದೇಶಿಸಿದ್ದೇನೆ. ಜತೆಗೆ, ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವಂತೆ ಡಿಸಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ಎಸ್‌ಸಿ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಅರಿವು ಮೂಡಿಸಬೇಕು. ಈ ಪ್ರಕರಣಗಳು ನಡೆದ ಸಂದರ್ಭದಲ್ಲಿ ಆರೋಪಿಗೆ ಕಾನೂನು ವ್ಯಾಪ್ತಿಯಲ್ಲಿ ಶಿಕ್ಷೆ ಆಗುವಂತೆ ಅಧಿಕಾರಿಗಳು ನಿಗಾ ವಹಿಸಲು ನಿರ್ದೇಶಿಸಲಾಗಿದೆ ಎಂದರು.

Leave a Reply

Your email address will not be published. Required fields are marked *