More

  ಮಕ್ಕಳ ಆಸಕ್ತಿ ಗುರುತಿಸಿ ಪ್ರೋತ್ಸಾಹಿಸಿ

  ನಂಜನಗೂಡು: ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳ ಆಸಕ್ತಿದಾಯಕ ವಿಷಯಗಳಿಗೆ ಪೂರಕವಾಗಿ ಶಿಕ್ಷಕರು ಪ್ರೋತ್ಸಾಹಿಸಿದರೆ ಮಾತ್ರ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.

  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

  ಪಠ್ಯ ವಿಷಯಗಳಿಗೆ ಮಾತ್ರ ಶೈಕ್ಷಣಿಕ ಚಟುವಟಿಕೆ ಸೀಮಿತಗೊಳಿಸಿದರೆ ವಿದ್ಯಾರ್ಥಿಗಳ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿ ವಿದ್ಯಾರ್ಥಿಯಲ್ಲೂ ತನ್ನದೇ ಆದ ವೈಶಿಷ್ಟ್ಯಪೂರ್ಣ ಅಭಿರುಚಿ ಕಲೆಗಾರಿಕೆ ಇರುತ್ತದೆ. ಅದಕ್ಕೆ ನೀರೆದು ಪೋಷಿಸಿ ಸಮೃದ್ಧವಾಗಿ ಬೆಳೆಸುವ ಕಾರ್ಯ ಶಿಕ್ಷಕರದ್ದಾಗಿದೆ. ದೇಸಿತನದಿಂದ ಕೂಡಿರುವ ರಂಗ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ನಮ್ಮ ಪರಂಪರೆಯನ್ನು ಉಳಿಸುವ ಮಹತ್ತರ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದರು.

  ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮಾತನಾಡಿದರು. ಮಂಜುಳಾ ನಿರಂಜನ್ ಹಾಗೂ ಎಂ.ನಂದೀಶ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಣ್ಣ, ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಸಿ.ಚಿಕ್ಕರಂಗನಾಯ್ಕ, ತಾಲೂಕು ಅಧ್ಯಕ್ಷ ಪಿ.ಮಹೇಶ್, ಬಿಸಿಎಂ ಮೋರ್ಚಾ ಅಧ್ಯಕ್ಷ ಹೆಮ್ಮರಗಾಲ ಸೋಮಣ್ಣ, ಪುರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಸೋಮಶೇಖರ್, ಕಾರ್ಯದರ್ಶಿ ಕುಮಾರಸ್ವಾಮಿ ಉಪಸ್ಥಿತರಿದ್ದರು.

  ಕಲಾ ಉತ್ಸವ: ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳ ಕಲಾ ಉತ್ಸವ ನೋಡುಗರ ಕಣ್ಮನ ಸೆಳೆಯಿತು. ದೇಶಭಕ್ತಿಯನ್ನು ಸಾರುವ ಗೀತೆಗಳಿಗೆ ವಿದ್ಯಾರ್ಥಿಗಳು ಸಾಮೂಹಿಕ ನೃತ್ಯ ಪ್ರದರ್ಶಿಸಿದರು. ಕೋಲಾಟ, ಭರತನಾಟ್ಯದಂತಹ ದೇಸಿ ಕಲೆಗಳನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts