
ಬೇಲೂರು: ಪ್ರಧಾನಿ ನರೇಂದ್ರ ಮೋದಿಯವರು 11 ವರ್ಷ ಅಧಿಕಾರ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಸಂಜಯ್ ಕೌರಿ ಅಧ್ಯಕ್ಷತೆಯಲ್ಲಿ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ಸಭಾ ಭವನದಲ್ಲಿ ವಿಕಸಿತ ಭಾರತದ ಅಮೃತ ಕಾಲ ಎಂಬ ಶೀರ್ಷಿಕೆಯಡಿ ಕಾರ್ಯಕರ್ತರಿಗೆ ಸೋಮವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಜನಪರ ಸಾಧನೆ ಮಹತ್ತರದ್ದಾಗಿದೆ. ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಹಲವು ಯೋಜನೆಗಳ ಮೂಲಕ ಅನುಕೂಲ ಕಲ್ಪಿಸಿದೆ. ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಮತ್ತು ಅನುದಾನಗಳು ಹಾಗೂ ಸೌಲಭ್ಯಗಳು ಎಲ್ಲ ವರ್ಗದ ಜನರಿಗೂ ತಲುಪಿಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆಗೂ ತೆರಳಿ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ಸಂಚಾಲಕ ಚೇತನ್, ಬಿಜೆಪಿ ಮಂಡಲದ ಅಧ್ಯಕ್ಷ ಸಂಜಯ್ ಕೌರಿ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್, ನವೀನ್, ಮುಖಂಡರಾದ ರಾಘವೇಂದ್ರ, ಜಿ.ಕೆ.ಕುಮಾರ್, ಸುಭಾಷ್, ಕಾರ್ಯಕರ್ತರು ಇದ್ದರು.