ಶನಿವಾರಸಂತೆ: ಶನಿವಾರಸಂತೆ ವ್ಯಾಪ್ತಿಯಲ್ಲಿ ಕಳೆದ 4 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.
ಕೆಲವು ಕಡೆ ಮಳೆಗಿಂತ ಗಾಳಿ ರಭ ಸವಾಗಿ ಬೀಸುತ್ತಿರುವುದರಿಂದ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ನಿಡ್ತ, ಆಲೂರು ಸಿದ್ದಾಪುರ ವ್ಯಾಪ್ತಿಯಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿರುವ ಹಿನ್ನೆಲೆಯಲ್ಲಿ 2 ದಿನಗಳಿಂದ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸೆಸ್ಕ್ ಸಿಬ್ಬಂದಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಭಾನುವಾರ ಮಳೆ-ಗಾಳಿಗೆ ಆಲೂರು ಸಿದ್ದಾಪುರ ಗ್ರಾಪಂ ವ್ಯಾಪ್ತಿಯ ಚಿಕ್ಕಕಣಗಾಲು ಗ್ರಾಮದ ನಿವೃತ್ತ ಪೊಲೀಸ್ ಸಿಬ್ಬಂದಿ ಬೆಳ್ಯಪ್ಪ ಎಂಬುವರಿಗೆ ಸೇರಿದ ವಾಸದ ಮನೆ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಆಲೂರು ಸಿದ್ದಾಪುರ, ಮಾಲಂಬಿ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಲ್ಲಿ 108.75 ಮಿಮೀ ಮಳೆ ದಾಖಲಾಗಿದೆ.