ಸಿನಿಮಾ

ಮಳೆ ಅನಾಹುತ ತಡೆಯಲು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಹಾಸನ: ಮುಂದಿನ ದಿನಗಳಲ್ಲಿ ಮಳೆ, ಗಾಳಿಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಂಗಳವಾರ ವೀಡಿಯೊ ಸಂವಾದ ನಡೆಸಿದ ಸಿದ್ದರಾಮಯ್ಯ ಅವರು, ಮಳೆಯಿಂದ ಹಾನಿ ಹಾಗೂ ಕೃಷಿ ಮತ್ತಿತರ ವಿಷಯಗಳ ಕುರಿತು ಮಾಹಿತಿ ಪಡೆದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕರ್ತವ್ಯ ಲೋಪವಾಗದಂತೆ ಕೆಲಸ ಮಾಡಲು ಸೂಚನೆ ನೀಡಿದರು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಏನಾದರೂ ಅನಾಹುತವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಕೊರತೆಯಾಗದಂತೆ ದಾಸ್ತಾನಿರುವಂತೆ ನೋಡಿಕೊಳ್ಳಬೇಕು ಹಾಗೂ ಸಕಾಲದಲ್ಲಿ ರೈತರಿಗೆ ಒದಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಳೆ, ಸಿಡಿಲು, ಗಾಳಿಯಿಂದ ಹಾನಿಯಾಗಿರುವ ಬೆಳೆ, ಮನೆ, ಜೀವ ಹಾನಿ, ಜಾನುವಾರು ಜೀವ ಹಾನಿಯಾಗಿದರೆ ಸೂಕ್ತ ಪರಿಹಾರ ನೀಡುವಂತೆ ತಿಳಿಸಿದ ಅವರು ಹಣದ ಅಗತ್ಯವಿದ್ದರೆ ಬೇಡಿಕೆಗೆ ಅನುಗುಣವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಅದರಂತೆ ಅಧಿಕಾರಿಗಳು ಜನತೆಗೆ ಸ್ಪಂದಿಸಿ ಉತ್ತಮ ಕೆಲಸ ಮಾಡುವ ಮೂಲಕ ಬದಲಾವಣೆ ಸಂದೇಶ ರವಾನೆ ಆಗಬೇಕು. ಕುಡಿಯುವ ನೀರು, ಕಸ ವಿಲೇವಾರಿ, ಮಳೆ ಬಂದಾಗ ಟ್ರಾಫಿಕ್ ಜಾಮ್ ಆಗಿ ಅಂಡರ್ ಪಾಸ್‌ನಲ್ಲಿ ನೀರು ನಿಂತು ಸಂಚಾರಕ್ಕೆ ತೊಡಕಾಗದಂತೆ ಅಧಿಕಾರಿಗಳು ನಿಗಾವಹಿಸಿ ಎಂದು ತಿಳಿಸಿದರು.
ಶಿಥಿಲಗೊಂಡಿರುವ ಶಾಲಾ ಕೊಠಡಿ, ಕೆರೆ – ಕಟ್ಟೆ, ಸೇತುವೆಗಳಿಂದಾಗುವ ಅನಾಹುತ ತಪ್ಪಿಸಲು ಮುಂಜಾಗ್ರತೆ ಕ್ರಮವಹಿಸಿ ಎಂದರಲ್ಲದೆ, ಮಳೆಯಿಂದ ಬಿದ್ದ ಮರ, ವಿದ್ಯುತ್ ಕಂಬಗಳನ್ನು ಕೂಡಲೇ ತೆರವುಗೊಳಿಸಬೇಕು. ಅಧಿಕಾರಿಗಳು ವಾಸ್ತವಾಂಶ ತಿಳಿಯಲು ಗ್ರಾಮಗಳಿಗೆ ಭೇಟಿ ನೀಡಿ ಪರಿಹಾರ ವಿತರಣೆ ಮಾಡಬೇಕು ಎಂದ ಅವರು, ಪ್ರವಾಹ ಬಂದು ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿ ಸರ್ಕಾರದ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಬೇಕು. ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ತಂಡಗಳನ್ನು ರಚನೆ ಮಾಡಿಕೊಂಡು ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಿ.ಎಸ್.ಆರ್ ನಿಧಿ ಜತೆಗೆ ಖಾಸಗಿ ಸಂಸ್ಥೆಯವರು ದತ್ತು ಪಡೆದು ಪ್ರತಿ ಜಿಲ್ಲೆಯಲ್ಲಿಯೂ ಒಂದೇ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬಹುದಾಗಿದೆ ಎಂದರು.
ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಆನಂದ್, ಹಾಸನ ಮತ್ತು ಸಕಲೇಶಪುರ ವಿಭಾಗಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Latest Posts

ಲೈಫ್‌ಸ್ಟೈಲ್