ಮಹಾತ್ಮರ ವಿಚಾರಧಾರೆ ಸಾರ್ವಕಾಲಿಕ

ಗದಗ: ದೇಶದ ಸ್ವಾತಂತ್ರ್ಯ್ಕಾಗಿ ಅನೇಕ ಮಹನೀಯರು ತ್ಯಾಗ ಬಲಿದಾನ ನೀಡಿದ್ದು, ಮಹಾತ್ಮಾ ಗಾಂಧೀಜಿ ಅವರು ಅಹಿಂಸಾ ವಿಚಾರಧಾರೆಗಳ ಮೂಲಕ ಹೋರಾಡಿ ಪಡೆದಂತಹ ಸ್ವಾತಂತ್ರ್ಯನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಾಸಣ್ಣ ಕುರಡಗಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಜರುಗಿದ ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಅವರು ಅಹಿಂಸೆಯ ಜೊತೆಗೆ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಿದ್ದರು. ಅವರ ಆಶಯದಂತೆ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ ಅವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ. ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸಲು ಶೌಚಗೃಹ ನಿರ್ವಿುಸಿದ್ದರೂ, ಅವು ಬಳಕೆಯಾಗುತ್ತಿಲ್ಲ. ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರು ಸಮಾಜಕ್ಕೆ ಕೊಟ್ಟಂತಹ ಕೊಡುಗೆಗಳನ್ನು ತಿಳಿದುಕೊಳ್ಳುವ ಅಗತ್ಯವಿದೆ. ಸತ್ಯ, ಪ್ರೇಮ, ಅಹಿಂಸೆ ಈ ಮೂರು ಆಯುಧಗಳ ಮೂಲಕ ಬ್ರಿಟೀಷ್​ರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ವ್ಯಕ್ತಿಯಾದ ಅವರು ಮಹಾನ್ ಶಕ್ತಿ ಎಂದರು.

ಸಾಹಿತಿ ರವೀಂದ್ರ ಕೊಪ್ಪರ ಅವರು ಮಹಾತ್ಮಾ ಗಾಂಧೀಜಿ ಕುರಿತು ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಮಂಜುನಾಥ ಚವ್ಹಾಣ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಉಪಸ್ಥಿತರಿದ್ದರು.

ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ರಡ್ಡೇರ ಸ್ವಾಗತಿಸಿದರು. ಉಷಾ ಕಾರಂತ ನಾಡಗೀತೆ ಹಾಗೂ ಗಾಂಧೀಜಿ ಅವರ ಭಜನೆ ಪ್ರಸ್ತುತ ಪಡಿಸಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿ, ವಂದಿಸಿದರು.

ವಿಶೇಷ ಸಂಚಿಕೆ ಬಿಡುಗಡೆ, ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಕಟಗೊಂಡ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ವಿಶೇಷ ಸಂಚಿಕೆಗಳನ್ನು ಜಿಪಂ ಅಧ್ಯಕ್ಷ ವಾಸಣ್ಣ ಕುರಡಗಿ ಬಿಡುಗಡೆಗೊಳಿಸಿದರು. ಇದೇ ವೇಳೆ ಮಹಾತ್ಮಾ ಗಾಂಧೀಜಿ 150ನೇ ವರ್ಷಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನ ಜರುಗಿತು.