ಮೈಸೂರು: ಮೈಸೂರು ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಮಾನಸಗಂಗೋತ್ರಿಯ ಇಎಂಎಂಆರ್‌ಸಿ ಸಭಾಂಗಣದಲ್ಲಿ ಗುರುವಾರ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಹಕಾರ ಕುರಿತು ಕನ್ನಡ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿತ್ತು.
ಮೈಸೂರು ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಮಹೇಂದ್ರ ಕುಮಾರ್ ಮಾತನಾಡಿ, ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಸಹಕಾರ ಅವಶ್ಯಕ. ಸಹಕಾರ ಇಲ್ಲದೆ ಯಾವ ಕ್ಷೇತ್ರವೂ ಅಭಿವೃದ್ಧಿ ಹೊಂದಲಾರದು. ಕೆಎಂಎಫ್ ಹಾಗೂ ನಂದಿನಿ ಬ್ರಾಂಡ್ ಸಾಕಷ್ಟು ಹೆಸರು ಮಾಡಿರುವುದೇ ಸಹಕಾರ ಅಗತ್ಯತೆಯನ್ನು ತಿಳಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ನಿರ್ವಹಣಾ ಸಂಸ್ಥೆ ಪ್ರಾಂಶುಪಾಲ ಚಂದ್ರಶೇಖರ್ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಇದೀಗ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದೆ. ಯುವ ಸಮುದಾಯ ಸಹಕಾರ ಕ್ಷೇತ್ರದ ಕುರಿತು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದರು.
ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ.ವಿ.ಗೋಪಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಾಪಾಲನಾ ನಿರ್ದೇಶನಾಲಯ ನಿರ್ದೇಶಕ ಡಾ.ಚಂದ್ರಶೇಖರ್, ಸಹಾಯಕ ನಿರ್ದೇಶಕ ಡಾ.ಎಸ್.ಎನ್.ಸುಷ್ಮಾ ಇದ್ದರು.