ಹಾಸನ: ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ದಯಾನಂದಪುರಿ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿ, ದೆಹಲಿ ಹೋಗಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮುಂದಿನ ವಾರದಿಂದ ಬಜೆಟ್ ಸಿದ್ಧತೆ ಮಾಡಿಕೊಳ್ಳುತ್ತೇನೆ. ನೀರಾವರಿ, ರೈತರಿಗೆ ಅನುಕೂಲ ಕಲ್ಪಿಸುವ ವಿಷಯಗಳೇ ಆದ್ಯತೆಯಾಗಿರುತ್ತವೆ. ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಆಲೋಚನೆಯೂ ಇದೆ ಎಂದು ಹಳೇಬೀಡು ಸಮೀಪದ ಮಾಯಗೊಂಡನಹಳ್ಳಿ ಹೆಲಿಪ್ಯಾಡ್ ನಲ್ಲಿ ಶನಿವಾರ ಸುದ್ದಿಗಾರರಿಗೆ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದಾಗ ನಮ್ಮ ಸಮಸ್ಯೆ ಗಮನಕ್ಕೆ ತರುವುದು ನನ್ನ ಕರ್ತವ್ಯ. ಹಾಗಾಗಿ ತುಮಕೂರಿನಲ್ಲಿ ಅವರಿಗೆ ರಾಜ್ಯದ ಜನರ ತೊಂದರೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವ ಬಗ್ಗೆ ಕೇಂದ್ರಕ್ಕೆ ಹೋಗಿ ಮತ್ತೊಮ್ಮೆ ಮನವಿ ಮಾಡುತ್ತೇನೆ. ಸಂಬಂಧಪಟ್ಟ ಇಲಾಖೆ ಸಚಿವರನ್ನು ಭೇಟಿಯಾಗಿ ಮಾತನಾಡಿ ಮನವಿ ಮಾಡುತ್ತೇವೆ ಎಂದರು.