ಮೈಕೊಡವಿ ಮೇಲೆದ್ದ ಮೈತ್ರಿಕೂಟ

ಮೈಸೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಮೈಕೊಡವಿ ಮೇಲೆದಿದ್ದು, ಸೋಮವಾರ ಹುಣಸೂರಿನಲ್ಲಿ ಜಂಟಿ ಪ್ರಚಾರ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದೆ. ಮತ್ತೊಂದೆಡೆ, ಬಿಜೆಪಿ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದೆ.

ಹುಣಸೂರಿನ ಗ್ರಾಮಾಂತರ ಬಸ್‌ನಿಲ್ದಾಣ ಮುಂಭಾಗದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಕಚೇರಿ ಆವರಣದಲ್ಲಿ ಉಭಯ ಪಕ್ಷಗಳ ಮುಖಂಡರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಜಂಟಿ ಪ್ರಚಾರದ ಸಂದರ್ಭದಲ್ಲೂ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿದಾಗ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಮೈತ್ರಿ ಧರ್ಮದ ಪಾಠ ಮಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪರಸ್ಪರ ಹೋರಾಟ ನಡೆಸಿದ್ದವು. ಆದರೆ, ಪ್ರಸ್ತುತ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಉಭಯ ಪಕ್ಷಗಳ ಕಾರ್ಯಕರ್ತರು ಶ್ರಮಿಸಬೇಕೆಂದು ಜಿಟಿಡಿ ಕರೆ ನೀಡಿದರು.

ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಇತರರು ಪಾಲ್ಗೊಂಡಿದ್ದರು.

ಪ್ರತಾಪ್‌ಸಿಂಹ ಪ್ರಚಾರ
ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಹುಣಸೂರು ತಾಲೂಕಿನ ಚಿಲ್ಕುಂದ, ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಕೊತ್ತೇಗಾಲ ಗ್ರಾ.ಪಂ. ವ್ಯಾಪ್ತಿಯ ಯಮಗುಂಬದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ದೇಶವನ್ನು ಮತ್ತಷ್ಟು ಪ್ರಗತಿಯ ಹಾದಿಯೆಡೆಗೆ ಕೊಂಡೊಯ್ಯಲು ಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಬಿಜೆಪಿ ಪ್ರಚಾರ ಸಭೆ
ಸೋಮವಾರಪೇಟೆಯ ಜೆಸಿ ವೇದಿಕೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣಿ, ಚಿತ್ರನಟ ಸುನಿಲ್ ಪುರಾಣಿಕ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಹಿಳಾ ಮೋರ್ಚಾ ರಾಜ್ಯ ಸಮಿತಿ ಸದಸ್ಯೆ ಸುಮಾ ಸುದೀಪ್, ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ ಇತರರು ಪಾಲ್ಗೊಂಡಿದ್ದರು.

ಎಸ್‌ಯುಸಿಐ ಪ್ರಚಾರ: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಷ್ಟ್) ಪಕ್ಷದ ಅಭ್ಯರ್ಥಿ ಪಿ.ಎಸ್.ಸಂಧ್ಯಾ ಪಟ್ಟಣದಲ್ಲಿ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಪ್ರಮುಖ ಮಾರ್ಗದಲ್ಲಿ ಕಾರ್ಯಕರ್ತರೊಂದಿಗೆ ಸಂಚರಿಸಿದ ಅವರು ಕಾಂಗ್ರೆಸ್ ಹಾಗೂ ಬಿಜೆಪಿಯ ಆಡಳಿತ ವೈಖರಿಯನ್ನು ಟೀಕಿಸಿದರು.

ಗ್ರಾಮಸ್ಥರ ಆಕ್ರೋಶ ಎದುರಿಸಿದ ಕಳಲೆ ಕೇಶವಮೂರ್ತಿ
ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ್ ಪರವಾಗಿ ಚುನಾವಣಾ ಪ್ರಚಾರಕ್ಕೆಂದು ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮಕ್ಕೆ ಆಗಮಿಸಿದ ಮಾಜಿ ಶಾಸಕ ಕಳಲೆ ಎನ್.ಕೇಶವಮೂರ್ತಿ ಗ್ರಾಮಸ್ಥರ ಆಕ್ರೋಶ ಎದುರಿಸಬೇಕಾಯಿತು. ಗ್ರಾಮದಲ್ಲಿ ಕುಡಿಯುವ ನೀರು, ಅನೈರ್ಮಲ್ಯ ಸಮಸ್ಯೆ ತಾಂಡವವಾಡುತ್ತಿದೆ. ಗ್ರಾಮಕ್ಕೊಂದು ಸ್ಮಶಾನ ಇಲ್ಲ. ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂದರ್ಭ ಕಳಲೆ ಕೇಶವಮೂತಿ ಅವರು ಗ್ರಾಮಸ್ಥರನ್ನು ಮನವೊಲಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

Leave a Reply

Your email address will not be published. Required fields are marked *