ಮೋಟೆಬೆನ್ನೂರಿಗೆ ಡಿಸಿ ಭೇಟಿ

ಬ್ಯಾಡಗಿ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಅವರು ಮೋಟೆಬೆನ್ನೂರಿಗೆ ಸೋಮವಾರ ಭೇಟಿ ನೀಡಿ ವಾಸ್ತವ ಸ್ಥಿತಿಯ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಬಹುತೇಕ ತಾಲೂಕಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಉಂಟಾಗಿದೆ. ತಾಲೂಕಿನ ಮೋಟೆಬೆನ್ನೂರು, ಲಕಮಾಜಿಕೊಪ್ಪ, ಬಿಸಲಹಳ್ಳಿ, ಶಿಡೇನೂರು ಸೇರಿ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವುದು ಗಮನಕ್ಕೆ ಬಂದಿದೆ. ಎಲ್ಲ ತಾಲೂಕಿನ ತಹಸೀಲ್ದಾರ್ ಹಾಗೂ ತಾ.ಪಂ. ಇಒಗಳು ಗ್ರಾ.ಪಂ. ಅಧಿಕಾರಿಗಳ ಸಭೆ ನಡೆಸುವ ಮೂಲಕ ತುರ್ತು ಕಾರ್ಯದಲ್ಲಿ ತೊಡಗಿದ್ದಾರೆ. ತೀವ್ರ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಟ್ಯಾಂಕರ್ ನೀರು ಪೂರೈಸಲು ಸೂಚಿಸಲಾಗಿದೆ. ಅಗತ್ಯವಿರುವ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ನೀರು ಪೂರೈಸುವ ಕಾರ್ಯ ನಡೆದಿದೆ ಎಂದರು.

ರಾಮಗೊಂಡನಹಳ್ಳಿ ಗ್ರಾಮದಲ್ಲಿ ಜಲಸಂಶೋಧಕರನ್ನು ಕರೆಸಿ ಕೂಡಲೇ ಕೊಳವೆಬಾವಿ ಕೊರೆಸಿ ನೀರಿನ ಸಮಸ್ಯೆ ಉದ್ಭವಿಸದಂತೆ ಮುಂಜಾಗ್ರತೆ ವಹಿಸಿ ಎಂದು ತಹಸೀಲ್ದಾರರಿಗೆ ಸೂಚಿಸಿದರು.

ತಹಸೀಲ್ದಾರ್ ಕೆ.ಗುರುಬಸವರಾಜ ಮಾತನಾಡಿ, ತಾಲೂಕಿನ ವಿವಿಧ ಗ್ರಾಮಗಳ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಕುಡಿಯುವ ನೀರಿನ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಗ್ರಾ.ಪಂ. ಅಧಿಕಾರಿಗಳಿಗೆ ತಿಳಿಸಲಾಗಿದೆ. 130ಕ್ಕೂ ಹೆಚ್ಚು ಕೊಳವೆಬಾವಿ ಕೊರೆಸಿದ್ದು, ಬಹುತೇಕ ವಿಫಲಗೊಂಡಿವೆ ಎಂದರು.

ಸಾರ್ವಜನಿಕರು ನೀರನ್ನು ಪೋಲು ಮಾಡಬಾರದು. ಅಗತ್ಯಕ್ಕಿಂತ ಹೆಚ್ಚು ನೀರು ಬಳಸಿದಲ್ಲಿ ಇನ್ನಷ್ಟು ಸಮಸ್ಯೆಯಾಗಲಿದೆ. ನೀರು ಪೋಲಾಗುವುದನ್ನು ತಪ್ಪಿಸಲು ಟ್ಯಾಪ್​ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ತಿಳಿಸಿದ್ದೇವೆ. ವಾರಕ್ಕೊಮ್ಮೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಇಂಜಿನಿಯರ್ ನೇತೃತ್ವದಲ್ಲಿ ಸಭೆ ನಡೆಸಿ, ನೀರಿನ ತೊಂದರೆಗೆ ಪರಿಹಾರ ಕಂಡು ಹಿಡಿಯಲಾಗುತ್ತಿದೆ ಎಂದರು.

ಕುಡಿಯುವ ನೀರು ಹಾಗೂ ಗ್ರಾಮೀಣ ನೈರ್ಮಲ್ಯ ಇಲಾಖೆ ಇಂಜಿನಿಯರ್ ಎಸ್.ಬಿ. ಚವ್ಹಾಣ, ತಾ.ಪಂ. ಇಒ ಪರಶುರಾಮ ಪೂಜಾರ ಇತರರಿದ್ದರು.

Leave a Reply

Your email address will not be published. Required fields are marked *