ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲದ ಡಾ.ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಡಿ.3ರಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅಧ್ಯಕ್ಷತೆ ವಹಿಸುವರು. ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಆಗಮಿಸುವರು. ಮಂಗಳೂರಿನ ವಿಜ್ಞಾನಿ ಇಡ್ಯಾ ಕರುಣಾಸಾಗರ ಘಟಿಕೋತ್ಸವ ಭಾಷಣ ಮಾಡುವರು ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಗಣ್ಯರಿಗೆ ಈ ಬಾರಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು.
ಕಲಾ ಕ್ಷೇತ್ರದಲ್ಲಿ ಪದ್ಮಶ್ರೀ ಪುರಸ್ಕೃತ ಕಲಾವಿದ ಪಂಡಿತ ಬಾಳೇಶ ಭಜಂತ್ರಿ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಉದ್ಯಮಿ ಗೋಪಾಲ ಜಿನಗೌಡ ಮತ್ತು ನಾಗರಿಕ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಗೋಪಾಲ ಹೊಸೂರ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದರು.
38,512 ವಿದ್ಯಾರ್ಥಿಗಳು ಪದವಿ, 5,909 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಈ ಘಟಿಕೋತ್ಸವದಲ್ಲಿ 11 ಚಿನ್ನದ ಪದಕ ನೀಡಲಾಗುತ್ತಿದೆ. 123 ಮಂದಿಗೆ ಪಿಎಚ್.ಡಿ ಪ್ರದಾನ ಮಾಡಲಾಗುತ್ತಿದೆ.