ವಿರಾಜಪೇಟೆ: ಏಡ್ಸ್ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ರೆಡ್ ರಿಬ್ಬನ್ ಹಾಗೂ ಎನ್‌ಎಸ್‌ಎಸ್ ಘಟಕಗಳ ಪಾತ್ರ ಮಹತ್ವದ್ದಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಅವರು ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಶನ್ ಘಟಕ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿರಾಜಪೇಟೆ ಐಸಿಟಿಸಿ ಘಟಕ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಗುರುವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಹಂತದಿಂದಲೇ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು. ಸಮಾಜಕ್ಕೆ ಹಾನಿಯಾಗುವಂತಹ ವಿಚಾರಗಳಲ್ಲಿ ತೊಡಗಿಸಿಕೊಳ್ಳದೆ ಸ್ವಾಸ್ತ್ಯ ಸಮಾಜವನ್ನು ನಿರ್ಮಿಸಬೇಕು ಎಂದು ಕರೆಕೊಟ್ಟರು.
ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಇರಬೇಕು. ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ. ಆ ನಿಟ್ಟಿನಲ್ಲಿ ಆಪ್ತ ಸಮಾಲೋಚನಾ ಘಟಕಗಳ ಪಾತ್ರ ಅಪಾರವಾಗಿದೆ ಎಂದರು.
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಘಟಕದ ಆಪ್ತ ಸಮಾಲೋಚಕ ಕೆ. ಜಿ.ಚಿಟ್ಟಿಯಪ್ಪ ಅವರು ಏಡ್ಸ್‌ನ ಲಕ್ಷಣಗಳು, ಚಿಕಿತ್ಸೆಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಬಿ. ಎನ್. ಶಾಂತಿಭೂಷಣ್, ಐಕ್ಯೂ ಎಸಿ ಸಂಚಾಲಕಿ ಹೇಮಾ, ರೆಡ್‌ಕ್ರಾಸ್ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಪರ್ಸನಲ್ ಕೌನ್ಸೆಲಿಂಗ್ ಘಟಕದ ಮುಖ್ಯಸ್ಥೆ ನಿರ್ಮಲಾ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
