ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ಸನ್ಮಾನಮಡಿಕೇರಿ: ಕಾರ್ಮಿಕರ ಸನ್ಮಾನ ದಿನದ ಪ್ರಯುಕ್ತ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಸನ್ಮಾನ ಪ್ರಶಸ್ತಿ ನೀಡುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮ ಕೃಷ್ಣ ಮಾತನಾಡಿ, ವಿಶೇಷ ಅಸಂಘಟಿತ ವಲಯಗಳಾದ ಟೈಲರ್, ಮೆಕ್ಯಾನಿಕ್, ಚಿಂದಿ ಆಯುವವರು, ಸಾರಿಗೆ ಮತ್ತಿತರ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ ಎಂದರು.
ವಿವಿಧ ವಲಯಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ತಲಾ ಒಬ್ಬರಂತೆ ಮಾ.1 ರಂದು ಸನ್ಮಾನಿಸುವ ಬಗ್ಗೆ ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ಕಾರ್ಮಿಕ ವರ್ಗದ ಇಬ್ಬರು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ 11 ವಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆಯಲು ನಿಗದಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕಾರ್ಮಿಕ ಇಲಾಖೆಗೆ ಸಲ್ಲಿಸುವಂತೆ ಮನವಿ ಮಾಡಿದರು. ಕಾರ್ಮಿಕರಿಗೆ ಸನ್ಮಾನ ಪ್ರಶಸ್ತಿಗಾಗಿ ನಮೂನೆ 5 ರಲ್ಲಿ ಭರ್ತಿ ಮಾಡಿ ಫೆ.5 ರೊಳಗೆ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ ಮನವಿ ಮಾಡಿದ್ದಾರೆ.
ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ನವೀಕರಣ, ಅಸಂಘಟಿತ ಕಾರ್ಮಿಕರ ಪರಿಹಾರ ಅರ್ಜಿ ಹಾಗೂ ಕಲ್ಯಾಣ ಯೋಜ ನೆಗಳ ಅನುಷ್ಠಾನದ ಮೇಲ್ವಿಚಾರಣೆ, ಸುಂಕ ಹಾಗೂ ವಂತಿಗೆ ಸಂಗ್ರಹಣೆಯ ಮೇಲ್ವಿಚಾರಣೆ, ಅಸಂಘಟಿತ ಕಾರ್ಮಿಕರ ಐಇಸಿ ಚಟುವಟಿಕೆಗಳ ಮೇಲ್ವಿಚಾರಣೆ, ವಾರ್ಷಿಕ ಪ್ರಶಸ್ತಿಗಾಗಿ ಅಸಂಘಟಿತ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಆಯ್ಕೆ ಮಾಡುವುದು. ತ್ರೈಮಾಸಿಕ ಶ್ರಮ ಸ್ಪಂದನಾ ಸಭೆಯ ಮೂಲಕ ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳನ್ನು ನಿವಾ ರಿಸುವುದು. ಅಸಂಘಟಿತ ಕಾರ್ಮಿಕರ ಕೌಶಲ ಅಭಿವೃದ್ಧಿಯ ಮೇಲ್ವಿಚಾರಣೆ, ಮೇ ದಿನಾಚರಣೆಯನ್ನು ಆಚರಿಸುವುದು, ಕಾರ್ಮಿಕ ಬಂಧುಗಳ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆ ಮತ್ತಿತರ ಕಾರ್ಯಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಭೂ ಸೇನಾ ನಿಗಮ, ಲೋಕೋಪಯೋಗಿ, ನಿರ್ಮಿತಿ ಕೇಂದ್ರದ ಇಂಜಿನಿಯರ್‌ಗಳು ಹಾಜರಿದ್ದರು.