ಶನಿವಾರಸಂತೆ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಮರಳಿ ಶಾಲೆಗೆ ಕರೆತರಲು ಶಿಕ್ಷಕರು ಶ್ರಮಿಸಬೇಕು ಎಂದು ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಸಲಹೆ ನೀಡಿದರು.
ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶನಿವಾರಸಂತೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸುವುದು ಮತ್ತು ಅದಕ್ಕೆ ಬೇಕಾದ ಅನುದಾನ ಪಡೆದುಕೊಳ್ಳುವುದು, ಚುನಾವಣೆ ಸಂದರ್ಭಗಳಲ್ಲಿ ಶಾಲೆಗಳಲ್ಲಿ ಮತಗಟ್ಟೆಗಳಿರುವ ಕೊಠಡಿಗಳನ್ನು ದುರಸ್ತಿ ಮಾಡಲು ಅನುದಾನ ಬಿಡುಗಡೆ ಆಗಿರುವ ಬಗ್ಗೆ ಮತ್ತು 5ನೇ ಹಾಗೂ 8ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗಳಿಗೆ ಸಂಬಂಧಪಟ್ಟಂತೆ ಮತ್ತು ಇತರ ಶೈಕ್ಷಣಿಕ ವಿಷಯಗಳ ಬಗ್ಗೆ ಅವರು ಸಮಗ್ರ ಮಾಹಿತಿ ನೀಡಿದರು. ಸಭೆಯಲ್ಲಿ ಬಿಆರ್‌ಪಿ ಮಧು, ಕ್ಲಸ್ಟರ್ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರು ಪಾಲ್ಗೊಂಡಿದ್ದರು.