ಗದಗ: ಜೀವನದಲ್ಲಿ ಶಿಸ್ತು ಹಾಗೂ ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿನಿಯರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ತಾಲೂಕಿನ ಮಲ್ಲಸಮುದ್ರದ ಮುರಾರ್ಜಿ ವಸತಿ ಶಾಲೆಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಸಪ್ತಾಹ ನಿಮಿತ್ತ ಗುರುವಾರ ಏರ್ಪಡಿಸಿದ್ದ ಬಾಲ್ಯ ವಿವಾಹ, ಫೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದಲ್ಲಿ ಬದಲಾವಣೆಗೆ ತಕ್ಕಂತೆ ಹೆಣ್ಣು ಮಕ್ಕಳು ಕೂಡಾ ಸನ್ನಿವೇಶ ಎದುರಿಸಲು ಸಮರ್ಥರಾಗಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲೆಯು ಎರಡು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಸ್ವ ರಕ್ಷಣೆ ಕುರಿತು ತರಬೇತಿ ನೀಡಲು ಕಿತ್ತೂರ ಚನ್ನಮ್ಮ ಪಡೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಪ್ರದೇಶದಲ್ಲಿ 18 ವರ್ಷದೊಳಗಿನವರ ವಿವಾಹ ನಡೆಯುತ್ತಿದ್ದರೆ ಕೂಡಲೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಕರೆ ಮಾಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದರು.
ಜಿಪಂ ಸಿಇಒ ಡಾ. ಆನಂದ ಕೆ. ಮಾತನಾಡಿ, ಹೆಣ್ಣುಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಯೋಜನೆಗಳ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಮಕ್ಕಳಿಗೆ ಹಕ್ಕುಗಳಿದ್ದು, ಅವುಗಳ ಬಗ್ಗೆ ತಿಳಿದುಕೊಂಡಿರಬೇಕು ಎಂದರು.
ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಮಾತನಾಡಿ, ಎಲ್ಲ ಮಕ್ಕಳಲ್ಲೂ ಪ್ರತಿಭೆ ಹಾಗೂ ವಿಶೇಷ ಶಕ್ತಿ ಇದೆ. ನಂಬಿಕೆ ಹಾಗೂ ಸತತ ಪ್ರಯತ್ನ ಅಗತ್ಯ. ಮಕ್ಕಳು ಪಠ್ಯದ ಜತೆಗೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಮಾನ್ಯ ಜ್ಞಾನ ಹೊಂದಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಚ್.ಎಚ್. ಕುಕನೂರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಮಲ್ಲಸಮುದ್ರ ಮುರಾರ್ಜಿ ವಸತಿ ಶಾಲೆ ಪ್ರಾಚಾರ್ಯ ಮಹಾಂತೇಶ ಲಮಾಣಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತಾಜ್ವುುನ್ನಿ ನಾಯ್ಕರ ಮತ್ತಿತರರು ಇದ್ದರು.
ಗೋಡೆ ಬರಹ
ಗದಗ-ಬೆಟಗೇರಿ ನಗರಸಭೆ ಆವರಣದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಪ್ತಾಹದ ಅಂಗವಾಗಿ ಜನಜಾಗೃತಿಗಾಗಿ ಗೋಡೆ ಬರಹ ಬರೆಯುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಗುರುವಾರ ಚಾಲನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಪೌರಾಯುಕ್ತ ಮನ್ಸೂರ ಅಲಿ ಮತ್ತಿತರರು ಇದ್ದರು.