ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವದ ಅಂಗವಾಗಿ ಮೇ 24ರಂದು ತಿರಂಗಾ ಯಾತ್ರೆಯನ್ನು ಬಿಜೆಪಿ-ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಸಮೀಪದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳ ಕುರಿತು ಚರ್ಚಿಸಿದರು. ಬೆಂಗಳೂರು-ಮೈಸೂರು ಹಳೆಯ ರಾಷ್ಟ್ರೀಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಬೆಳಗ್ಗೆ 10.30ಕ್ಕೆ ಯಾತ್ರೆ ಆರಂಭವಾಗಲಿದೆ. ಪಟ್ಟಣದ ಮುಖ್ಯ ರಸ್ತೆಯಲ್ಲಿ ತ್ರಿವರ್ಣ ಧ್ವಜಗಳೊಂದಿಗೆ ಪಾದಯಾತ್ರೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಸಾಗಲಿದೆ ಎಂದು ಮುಖಂಡರು ಮಾಹಿತಿ ನೀಡಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಬಿಜೆಪಿ ಮುಖಂಡ ಟಿ.ಶ್ರೀಧರ್, ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ಜೆಡಿಎಸ್ ಮುಖಂಡ ಪೈ.ಮುಕುಂದ ಇದ್ದರು.