ಬೆಳಗಾವಿ: ರಾಜ್ಯದಲ್ಲಿಯೇ ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಬಾರಿ ೧೧ ಶಾಸಕರನ್ನು ಗೆಲ್ಲಿಸಿರುವ ಬೆಳಗಾವಿ ಜಿಲ್ಲೆಯ ಆರು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.
ಜಿಲ್ಲೆಯ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ತೊರೆದು,ಕಾಂಗ್ರೆಸ್ ಸೇರ್ಪಡೆಯಾಗಿರುವ ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಶಾಸಕ ಮೂರು ಬಾರಿ ಗೆದ್ದಿರುವ ಗಣೇಶ ಹುಕ್ಕೇರಿ ಅಥವಾ ಅವರ ತಂದೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬೈಲಹೊಂಗಲ ಶಾಸಕ ಹಾಗೂ ಕೆಎಲ್‌ಇ ಅಧ್ಯಕ್ಷ ಮಹಾಂತೇಶ ಕೌಜಲಗಿ ಹಾಗೂ ರಾಮದುರ್ಗ ಶಾಸಕ ಅಶೋಕ ಪಟ್ಟಣ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದು, ತೆರೆ-ಮರೆಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಪಂಚಮಸಾಲಿ ಸಮಾಜದ ಮುಖಂಡರು ಬೆಂಗಳೂರಿನಲ್ಲಿ ಸಭೆ ಸೇರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಸಚಿವ ಸ್ಥಾನ ನೀಡುವಂತೆ ಸಭೆಯಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೇ ಸಚಿವ ಸ್ಥಾನದ ಲಾಬಿ ನಡೆಸುವುದಕ್ಕಾಗಿ ಹೆಬ್ಬಾಳ್ಕರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸ್ಥಾನ ಮಾತ್ರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಒಲಿಯುವುದು ಬಹುತೇಕ ಖಚಿತವಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ಸತೀಶ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.