ಅರಕಲಗೂಡು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಶೈಕ್ಷಣಿಕವಾಗಿ ಅನೇಕ ಸವಲತ್ತುಗಳು ಸಿಗುತ್ತಿದ್ದು ಪಾಲಕರು ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ತಿಳಿಸಿದರು.

ತಾಲೂಕಿನ ಮಲ್ಲಿಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಹೋಬಳಿ ಮಟ್ಟದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿಯನ್ನು ಸರ್ಕಾರ ಹೊಂದಿದ್ದು ಅದಕ್ಕಾಗಿ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ . ಪಾಲಕರು ಇದರ ಉಪಯೋಗ ಪಡೆಯುವಂತೆ ತಿಳಿಸಿದರು.
ಖಾಸಗಿ ಶಾಲೆಗಳಿಗೆ ಮಿಗಿಲಾಗಿ ಉತ್ತಮ ಸೌಲಭ್ಯದೊಂದಿಗೆ ಮಕ್ಕಳ ಮನೆ ತೆರೆದು ಪೂರ್ವ ಪ್ರಾಥಮಿಕ ಶಾಲೆಗಳಿಂದಲೇ ಮಕ್ಕಳಿಗೆ ಇಂಗ್ಲಿಷ್ ಬೋಧನೆ ಮಾಡಲಾಗುತ್ತಿದೆ. ಪಾಲಕರು ಖಾಸಗಿ ಕಾನ್ವೆಂಟ್‌ಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳಿಗೆ ಇವುಗಳ ಸದುಪಯೋಗ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಎ.ರಂಗಸ್ವಾಮಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕಾಂಶ ಶಕ್ತಿ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಮುದಾಯದ ಪಾತ್ರ ಮಹತ್ವದ್ದು .ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆಗೆ ಅಗತ್ಯವಾದ ಹಲವು ಶೈಕ್ಷಣಿಕ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೌಲತ್ ಪಾಷ, ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿದರು. ಮುಖ್ಯ ಶಿಕ್ಷಕಕರಾದ ಮಮತಾ, ದಿನೇಶ್, ಸಿಆರ್‌ಪಿ ಮಲ್ಲಿಕಾರ್ಜುನ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ನಿಂಗಯ್ಯ ಇತರರಿದ್ದರು.