ಸರ್ಕಾರಿ ಸೌಲಭ್ಯಕ್ಕೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಪ್ರತಿಭಟನೆ

ಬೆಳಗಾವಿ: ಸಾರಿಗೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಸಾರಿಗೆ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.

ಕೆಎಸ್‌ಆರ್‌ಟಿಸಿ,ಬಿಎಂಟಿಸಿ, ವಾಯವ್ಯ, ಈಶಾನ್ಯ ವಿಭಾಗಗಳಲ್ಲಿ ಸಾರಿಗೆ ನೌಕರರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ಸರ್ಕಾರಿ ನೌಕರರಿಗೆ ಸಿಗುತ್ತಿರುವ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಸಾರಿಗೆ ನೌಕರರಿಗೆ ತುಟ್ಟಿಭತ್ಯ, ಆರೋಗ್ಯ ಸೌಲಭ್ಯ, ರಜೆ, ವೇತನ ಸೇರಿದಂತೆ ಯಾವುದೇ ಸೌಲಭ್ಯಗಳು ಸಿಗದೆ ನೌಕರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದೂರಿದರು.

ಕಳೆದ ದಶಕಗಳಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಗಳಿಗೆ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಸಾರಿಗೆ ನೌಕರರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ. ಸರ್ಕಾರ ಯಾವುದೇ ವೇತನ ಆಯೋಗದ ಸೌಲಭ್ಯಗಳು ಸಿಗುತ್ತಿಲ್ಲ. ಹೆಸರಿಗೆ ಮಾತ್ರ ಸರ್ಕಾರಿ ಸಾರಿಗೆ ನೌಕರರು. ಆದರೆ, ವಾಸ್ತವ್ಯದಲ್ಲಿ ಖಾಸಗಿ ನೌಕರರಿಗಿಂತ ಕೆಳಹಂತದಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.

ಕಡಿಮೆ ವೇತನದಲ್ಲಿ ಕನಿಷ್ಠ 14 ರಿಂದ 18 ಗಂಟೆ ಸಾರಿಗೆ ನೌಕರರು ದುಡಿಯುತ್ತಿದ್ದಾರೆ. ಸಾರಿಗೆ ನಿಗಮಗಳ ನೌಕರರು ಎಂದು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಸಾರಿಗೆ ಸಂಸ್ಥೆಯು ಇಡೀ ರಾಜ್ಯದ ಜೀವನಾಡಿಯಾಗಿದ್ದು ರಾಜ್ಯದ ಉದ್ದಗಲಕ್ಕೂ ವ್ಯಾಪಿಸಿದೆ. ಹಾಗಾಗಿ ನಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನೌಕರರು ಮನವಿ ಮೂಲಕ ವಿನಂತಿಸಿದರು.