ಚಿತ್ರದುರ್ಗ: ರಾಜ್ಯ ಸರ್ಕಾರ ಹೊಸಪೇಟೆಯಲ್ಲಿ ಮಂಗಳವಾರ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಲೂಟಿಕೋರರ ಸಂತೆ ಎಂದು ಹೊಳಲ್ಕೆರೆಯ ಬಿಜೆಪಿ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನೊಬ್ಬ ಹಿರಿಯ ಶಾಸಕ, ಆಡಳಿತ ವ್ಯವಸ್ಥೆ ಅರಿತಿದ್ದೇನೆ. ಆದರೆ ಕಳೆದ 2 ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಗ್ಯಾರಂಟಿಗಳ ಹೆಸರಲ್ಲಿ ಜನರ ಸಮಸ್ಯೆಗಳಿಗೆ ಈ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರದ ತೆರಿಗೆ ನೀತಿಗಳು ಜನರಿಗೆ ಹೊರೆಯಾಗುತ್ತಿವೆ ಎಂದು ತಿಳಿಸಿದರು.
ದರ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಅಸಹ್ಯಕರ, ಭ್ರಷ್ಟಾಚಾರದಿಂದ ಕೂ ಡಿರುವ ಸರ್ಕಾರವನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಮಾವೇಶದ ನಾಟಕವಾಡುತ್ತಿದ್ದಾರೆ. ಸರ್ಕಾರಕ್ಕೆ ಛೀಮಾರಿ ಹಾಕುತ್ತಿರುವ ರಾಜ್ಯದ ಆರೂವರೆ ಕೋಟಿ ಜನರ ದಿಕ್ಕು ತಪ್ಪಿಸಲು, ಸರ್ಕಾರದ ತಪ್ಪುಗಳನ್ನು ಮುಚ್ಚಿಕೊಳ್ಳಲು ಲೂಟಿಕೋರರ ಸಮಾವೇಶ ನಡೆಯುತ್ತಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ಕಮಿಷನ್ ಆರೋಪದಲ್ಲಿ ಹುರುಳಿಲ್ಲವೆಂದು ವರದಿ ಸಲ್ಲಿಕೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡದೇ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಕಾಂಗ್ರೆಸ್‌ಗೆ ಎಟಿಎಂ ಆಗಿರುವ ಈ ಸರ್ಕಾರದಲ್ಲಿ ಶೇ. 60 ಭ್ರಷ್ಟಾಚಾರವಿದೆ. ಆಡಳಿತ ಪಕ್ಷದ ಶಾಸಕರು ಬಿಡುಗಡೆಯಾದ ಅನುದಾನದ ವಿವರವನ್ನು ಜನರಿಗೆ ನೀಡದೇ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಅಧಿಕಾರಾವಧಿಯಲ್ಲಿ ಮಂಜೂರಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು, ಡಿಸಿ ಆಫೀಸ್ ಹೊಸ ಕಟ್ಟಡ ಇತ್ಯಾದಿ ಅಭಿವೃದ್ಧಿ ಕಾಮಗಾರಿಗಳು ಜಿಲ್ಲೆಯಲ್ಲಿ ನಡೆಯುತ್ತಿವೆ ಹೊರತು ಒಂದೇ ಒಂದು ಅಭಿವೃದ್ಧಿ ಕೆಲಸಗಳನ್ನು ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಿಂದಾಗಲಿ ಅಥವಾ ಐವರು ಕಾಂಗ್ರೆಸ್ ಶಾಸಕರಿಗೆ ಸಾಧ್ಯವಾಗಿಲ್ಲವೆಂದು ಟೀಕಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡದೇ ಇದ್ದರೂ, ಕೇಂದ್ರದ ನೆಪ ಹೇಳಿಕೊಂಡು ರಾಜ್ಯ ಸರ್ಕಾರ ಈ ಯೋಜನೆ ಕಡೆಗಣಿಸುತ್ತಿದೆ. ಕಣ್ಣಿಗೆ ಮಣ್ಣೆರಚಿ ಜನರನ್ನು ವಂಚಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ದಕ್ಷ ಆಡಳಿತವಿದೆ. ಪಾಕಿಸ್ತಾನ, ಚೀನಾ ಮತ್ತು ಅಮೆರಿಕವೂ ಕೂಡ ಈಗ ಭಾರತಕ್ಕೆ ಹೆದರಬೇಕಿದೆ. ನೀರಾವರಿ, ರಾಷ್ಟ್ರೀಯ ಹೆದ್ದಾರಿ ಹಾಗೂ ಜೆಜೆಎಂನಂಥ ಹಲವು ಜನರ ಯೋಜನೆಗಳಿಗೆ ಲಕ್ಷಾಂತರ ಕೋಟಿ ರೂ. ಅನುದಾನ ಕೇಂದ್ರದಿಂದ ಬಿಡುಗಡೆಯಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ಸಂಪತ್‌ಕುಮಾರ್, ಮಲ್ಲಿಕಾರ್ಜುನ್, ನಾಗರಾಜ್, ಲೋಕೇಶ್, ನಾಗರಾಜ್ ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ, ಶಿವಪ್ರಕಾಶ್ ದಗ್ಗೆ ಇದ್ದರು.
