ಸುಳ್ಳುಗಳ ಸರಮಾಲೆಯೇ ಬಿಜೆಪಿ ಸರ್ಕಾರದ ಸಾಧನೆ

ಶಿವಮೊಗ್ಗ: ಸುಳ್ಳುಗಳ ಸರಮಾಲೆಯೇ ಬಿಜೆಪಿ ಸರ್ಕಾರದ ಸಾಧನೆ ಎಂದು ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಟೀಕಿಸಿದರು.

ಬಂಜಾರ ಸಮುದಾಯ ಭವನದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ 5 ವರ್ಷಗಳಲ್ಲಿ ಕೆಲಸ ಮಾಡಿದ್ದರೆ ಪ್ರಚಾರಕ್ಕೆ ವಿಷಯ ಸಿಗುತ್ತಿತ್ತು. ಸುಳ್ಳುಗಳಿಂದಲೇ ಕಾಲಹರಣ ಮಾಡಿದ ಕಾರಣ ಪ್ರಚಾರಕ್ಕೆ ವಿಷಯಗಳಿಲ್ಲ ಎಂದು ವ್ಯಂಗ್ಯವಾಡಿದರು.

ಸಮ್ಮಿಶ್ರ ಸರ್ಕಾರದ ಕುರಿತು ಅಪಪ್ರಚಾರ ಮಾಡುವ ಬಿಜೆಪಿಯು ಕೇಂದ್ರದಿಂದ ದೇಶ ಹಾಗೂ ರಾಜ್ಯದ ಬಡಜನರಿಗೆ ನೀಡಿರುವ ಕೊಡುಗೆ ಹೇಳಲಿ. ರೈತರ ಸಾಲಮನ್ನಾ ಮಾಡಲು ಮುಂದಾಗಿಲ್ಲ. ಬಡ ವರ್ಗದ ಜನರಿಗೆ ಯಾವುದೇ ಉಪಯುಕ್ತ ಯೋಜನೆ ಜಾರಿಗೊಳಿಸಿಲ್ಲ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದಾರೆ. ಜಿಲ್ಲೆಗೆ 1,145 ಕೋಟಿ ರೂ. ಅನುದಾನ ನೀಡಿದ್ದಾರೆ. ಅಭಿವೃದ್ಧಿ ಕೆಲಸದ ಆಧಾರದಲ್ಲಿ ಮತ ಕೇಳುತ್ತೇವೆ. ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಸಮ್ಮಿಶ್ರ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗಳಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ತಿಳವಳಿಕೆ ಮೂಡಿಸಬೇಕು ಎಂದು ತಿಳಿಸಿದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡುವುದಾಗಿ ಘೊಷಿಸಿದ್ದಾರೆ. ರಾಜಕೀಯ ಇತಿಹಾಸ ಗಮನಿಸಿದರೆ ಪ್ರಣಾಳಿಕೆ ಅಂಶಗಳನ್ನು ಕಾರ್ಯರೂಪಕ್ಕೆ ತರುವ ಪಕ್ಷ ಕಾಂಗ್ರೆಸ್. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಎಂಎಲ್​ಸಿ ಆರ್.ಪ್ರಸನ್ನಕುಮಾರ್, ವಿಶ್ವನಾಥ್ ಕಾಶಿ, ನಾಗರಾಜ್, ಎಸ್.ಪಿ.ಶೇಷಾದ್ರಿ, ಎಚ್.ಸಿ.ಯೋಗೀಶ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಏ. 3ಕ್ಕೆ:ಶಿವಮೊಗ್ಗದಲ್ಲಿ ಏ. 3ಕ್ಕೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸುವರು. ರಾಮಣ್ಣಶ್ರೇಷ್ಠಿ ಪಾರ್ಕ್​ನಿಂದ ಮೆರವಣಿಗೆ ನಡೆಯಲಿದೆ. ಎರಡು ಪಕ್ಷಗಳ ರಾಜ್ಯಮಟ್ಟದ ನಾಯಕರು ಪಾಲ್ಗೊಳ್ಳುವರು. ಮಾ. 30ರಂದು ಜಿಲ್ಲೆಯಲ್ಲಿ ನಡೆಯುವ ಪ್ರಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕರ್ತರ ಬೇಸರ:ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಗರಮಟ್ಟದ ಪ್ರಚಾರ ಸಭೆ ಆರಂಭಗೊಂಡಿದೆ. ಮಂಗಳವಾರ ಹಾಗೂ ಬುಧವಾರ ನಗರದ ಎಲ್ಲ ವಾರ್ಡ್​ಗಳಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ವೇದಿಕೆ ಬ್ಯಾನರ್​ನಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಭಾವಚಿತ್ರ ಸಣ್ಣದಾಗಿ ಹಾಕುವ ಮೂಲಕ ಕಡೆಗಣಿಸಲಾಗಿದೆ ಎಂದು ಕೆಲ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.