ಹಳೆಯ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ವಿಜಯವಾಣಿ ಸುದ್ದಿಜಾಲ ಬೀದರ್
ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಎಚ್ಕೆಆರ್ಡಿಬಿ) ಅನುದಾನದಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ಹಳೆಯ ಕಾಮಗಾರಿಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಿ ಎಂದು ಮಂಡಳಿ ಕಾರ್ಯದರ್ಶಿ ಸುಭೋದ ಯಾದವ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಚ್ಕೆಆರ್​ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಮಂಡಳಿಯಿಂದ ಆಯಾ ವರ್ಷ ನೀಡಿರುವ ಕೆಲಸ ಅದೇ ವರ್ಷ ಪೂರ್ಣಗೊಳಿಸಬೇಕು. ಒಂದು ವರ್ಷದಲ್ಲಿ ಪೂರ್ಣಗೊಳಿಸಲು ಸಾಧ್ಯವಾದಷ್ಟು ಕೆಲಸ ಮಾತ್ರ ಕೈಗೆತ್ತಿಕೊಳ್ಳಬೇಕು. ಕೆಲಸ ಇನ್ನೂ ಉಳಿದಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಹಣ ಪಡೆಯಬೇಕು. ಅನುದಾನ ಬಿಡುಗಡೆಯಾದ ಬಳಿಕ ವಿಳಂಬ ಮಾಡುವುದು ಸರಿಯಲ್ಲ ಎಂದರು.
ಕೆಲಸ ಬೇಗ ಪೂರ್ಣಗೊಳ್ಳಲಿ ಎಂಬ ಉದ್ದೇಶದಿಂದ ಅಲ್ಪಾವಧಿ ಟೆಂಡರ್ ಕರೆಯಲಾಗುತ್ತದೆ. ಕೆಲವು ಅಧಿಕಾರಿಗಳು ಅಲ್ಪಾವಧಿ ಟೆಂಡರ್ ಕರೆದ ನಂತರವೂ ಕೆಲಸ ಆರಂಭಿಸಲು ವಿಳಂಬ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಇಂಥ ನಿರ್ಲಕ್ಷೃ ಸಹಿಸಲಾಗದು ಎಂದು ಎಚ್ಚರಿಸಿದರು.
ಕಟ್ಟಡ ಕಾಮಗಾರಿ ಆರಂಭಿಸಲು ನಿವೇಶನದ ಸಮಸ್ಯೆ ಇದೆ ಎಂದು ಕೆಲ ಅಧಿಕಾರಿಗಳು ತಿಳಿಸಿದಾಗ, ನಿವೇಶನ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲೇ ಪರಿಹರಿಸಿಕೊಂಡು ಕೆಲಸ ಬೇಗ ಆರಂಭಿಸಿ ಕಾಲಮಿತಿಯಲ್ಲಿ ಮುಗಿಸಬೇಕು ಎಂದು ತಾಕೀತು ಮಾಡಿದರು.
ಜಂಟಿ ನಿರ್ದೇಶಕ ಬಸವರಾಜ ಮಾತನಾಡಿ, ಆಯಾ ಇಲಾಖೆ ಅಧಿಕಾರಿಗಳು ಕಾಮಗಾರಿಗಳ ಪ್ರಗತಿ ವಿವರಗಳನ್ನು ಕಾಲಕಾಲಕ್ಕೆ ವೆಬ್ಸೈಟ್ನಲ್ಲಿ ದಾಖಲಿಸಬೇಕು. ಒಮ್ಮೆ ಮಾಹಿತಿ ದಾಖಲಿಸಿದ ನಂತರ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಮಾಹಿತಿ ಸೇರಿಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕಾಮಗಾರಿ ಪೂರ್ಣಗೊಂಡರೂ ಸಂಬಂಧಿಸಿದ ಇಲಾಖೆಗೆ ಕಟ್ಟಡವನ್ನು ಒಪ್ಪಿಸದೆ ಇರುವುದರಿಂದ ಆ ಕಟ್ಟಡಗಳ ಬಳಕೆಯಾಗುತ್ತಿಲ್ಲ. ಅಧಿಕಾರಿಗಳು ಕಾಮಗಾರಿ ಪೂರ್ಣಗೊಂಡ ತಕ್ಷಣ ಷರತ್ತುಗಳಿಗೆ ಅನುಗುಣ ಕಟ್ಟಡ ನಿರ್ಮಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿ ಬೇಗ ತಮ್ಮ ವಶಕ್ಕೆ ಪಡೆಯಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ, ಜಿಪಂ ಸಿಇಒ ಮಹಾಂತೇಶ ಬೀಳಗಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್ಐಡಿಎಲ್ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.