More

    ಅಪೌಷ್ಟಿಕತೆ ನಿವಾರಣೆಗೆ ಮುಂದಾಗಿ

    ಗದಗ: ಆರ್ಥಿಕವಾಗಿ ಸಶಕ್ತರಾಗಿರದ ರೋಗಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು ಎಂದು ವೈದ್ಯರಿಗೆ ಜಿಪಂ ಸಿಇಒ ಡಾ. ಸುಶೀಲಾ ಅವರು ಸೂಚನೆ ನೀಡಿದರು.

    ಜಿಲ್ಲಾಡಳಿತ ಭವನದ ಆರೋಗ್ಯ ಇಲಾಖೆಯ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯಿಂದ ಎಲ್ಲ ಹಂತದ ಸಾರ್ವಜನಿಕರು ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರ ಕಾರ್ಯ ನಿರ್ವಹಿಸಬೇಕು ಎಂದರು.

    ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕು. ಮಕ್ಕಳ ತೂಕವನ್ನು ಡಿಜಿಟಲ್ ಯಂತ್ರದ ಮೂಲಕ ಮಾಡಬೇಕು. ನಿಖರವಾದ ತೂಕವನ್ನು ನಮೂದಿಸಿ ಒಂದು ವೇಳೆ ಅಪೌಷ್ಟಿಕತೆಯಿಂದ ಬಳಲುತ್ತಿದ್ದಲ್ಲಿ ಆರೋಗ್ಯ ಸುಧಾರಣೆಗೆ ಹೆಚ್ಚಿನ ಆರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲಾಖೆಗಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಇರುವ ಸೌಲಭ್ಯಗಳ ಕುರಿತು ಅನುಷ್ಠಾನಾಧಿಕಾರಿಗಳು ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸುವಂತೆ ನಿರ್ದೇಶನ ನೀಡಿದರು.

    ಆರೋಗ್ಯ ವ್ಯವಸ್ಥೆ ಸುಧಾರಣೆಗಾಗಿ ಜಾರಿಗೊಳಿಸಲಾದ ಅಮೃತ ಆರೋಗ್ಯ ಸೇವೆ ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.ನಿಗದಿತ ಅವಧಿಯೊಳಗೆ ಸಿವಿಲ್ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ನಿಯಮಾನುಸಾರ ಅವಧಿ ವಿಸ್ತರಣೆಗೆ ಸಕಾರಣ ನೀಡಿ ಅನುಮೋದನೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.

    ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಸಭೆಗೆ ಪ್ರಗತಿ ವಿವರ ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಆರ್​ಸಿಎಚ್ ಅಧಿಕಾರಿ ಡಾ.ಬಿ.ಎಂ. ಗೊಜನೂರ ಇತರರು ಇದ್ದರು.

    ಅಸಮಾಧಾನ: ಸರ್ಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ನಾರ್ಮಲ್ ಹಾಗೂ ಸಿಜೇರಿಯನ್ ಹೆರಿಗೆಗಳ ಕುರಿತು ಅಂಕಿ ಅಂಶಗಳನ್ನು ಪರಾಮಶಿಸಿದ ಡಾ. ಸುಶೀಲಾ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ನಾರ್ಮಲ್ ಹೆರಿಗೆಗೆ ಆದ್ಯತೆ ನೀಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಸಿಜೇರಿಯನ್ ಹೆರಿಗೆ ಮಾಡಿಸಬೇಕು. ಅಲ್ಲದೆ, ಖಾಸಗಿ ಆಸ್ಪತೆಗಳಲ್ಲಿ ಆಗುತ್ತಿರುವ ಸಿಜೇರಿಯನ್ ಹೆರಿಗೆಗಳ ಕುರಿತು ಇಲಾಖೆ ವೈದ್ಯಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts