ಅಭಿವೃದ್ಧಿ ಕಾಮಗಾರಿಗಳ ಶ್ವೇತಪತ್ರ ಹೊರಡಿಸಲಿ:ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್

ಅಭಿವೃದ್ಧಿ ಕಾಮಗಾರಿಗಳ ಶ್ವೇತಪತ್ರ ಹೊರಡಿಸಲಿ:ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್
Published on

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದ್ದರೆ ತಮ್ಮ ಆಡಳಿತಾವಧಿಯಲ್ಲಿ ಆಗಿರುವ ಕಾಮಗಾರಿಗಳ ಶ್ವೇತಪತ್ರ ಹೊರಡಿಸಲಿ ಎಂದು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಸವಾಲು ಹಾಕಿದರು.
ರಾಜ್ಯಸಭೆಯಲ್ಲಿ ಗೌಡರು, ಮೊಮ್ಮಗ ಪ್ರಜ್ವಲ್ ರೇವಣ್ಣ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಅರ್ಹತೆ ಹೊಂದಿದ್ದಾರೆ. ಆದರೆ ಕಳೆದ ಐದು ವರ್ಷದಲ್ಲಿ ಸಂಸದರು ಯಾವ ಕೆಲಸವನ್ನು ಮಾಡಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಈಗ ಓಡಾಟ ಪ್ರಾರಂಭಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಆಲೂರಿನಲ್ಲಿ ರೈಲು ನಿಲುಗಡೆ ಆಗಿದ್ದನ್ನೇ ದೊಡ್ಡ ಸಾಧನೆ ಎಂಬಂತೆ ಪ್ರಚಾರ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಐದು ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಏನು ಮಾಡಿದ್ದಾರೆ. ಒಂದು ದಿನವು ಕೂಡ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಗೆ ಜನರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಯನ್ನೇ ಕಳೆದುಕೊಳ್ಳಬೇಕಾಯಿತು. ಕೂಲಿ ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗುವುದು ಸಾಮಾನ್ಯವಾಗಿದೆ. ಈ ರೀತಿಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಸೋಲಾರ್ ಪೆನ್ಸಿಂಗ್, ಬ್ಯಾರಿಕೇಡ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ರೈಲ್ವೆ ಬ್ಯಾರಿಕೇಡ್ ಒದಗಿಸಲು ಕೇಂದ್ರ ಸರ್ಕಾರವೇ ಮುಂದಾದರೂ ಸಂಸದರು ಮುತುವರ್ಜಿ ವಹಿಸಿ ಯೋಜನೆ ತರಲಿಲ್ಲ. ಇವರಿಗೆ ಮಲೆನಾಡಿನ ಸಮಸ್ಯೆಗಳು ಲೆಕ್ಕಕ್ಕೆ ಇಲ್ಲವಾಗಿದೆ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net