More

    ಅವೈಜ್ಞಾನಿಕ ಕಾಮಗಾರಿಯಿಂದ ಮದ್ದೂರು ಪುರಸಭೆಗೆ ನಷ್ಟ


    ಮದ್ದೂರು: ಪಟ್ಟಣ ವ್ಯಾಪ್ತಿಯಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿರುವ ಕಾರಣ ಪುರಸಭೆಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದ್ದು, ನಷ್ಟದ ಹಣವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಭರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಸದಸ್ಯರಾದ ಎಂ.ಐ.ಪ್ರವೀಣ್, ಪ್ರಿಯಾಂಕಾ ಅಪ್ಪುಗೌಡ ಒತ್ತಾಯಿಸಿದರು.

    ಪಟ್ಟಣದ ಪುರಸಭೆ ಕಚೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಅಧ್ಯಕ್ಷ ಎಸ್.ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು.ಪುರಸಭಾ ವ್ಯಾಪ್ತಿಯಲ್ಲಿ ದಶಪಥ ಹೆದ್ದಾರಿ ಕಾಮಗಾರಿಯನ್ನು ಯೋಜನೆಯಂತೆ ಮಾಡದೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮನಸ್ಸೋಇಚ್ಛೆ ಮಾಡುತ್ತಿದ್ದಾರೆ. ಪುರಸಭಾ ಅಧಿಕಾರಿಗಳ ಮನವಿಗೂ ಸ್ಪಂದಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಹಲವಾರು ಸಮಸ್ಯೆಗಳು ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಆಪಾದಿಸಿದರು.

    ಒಳಚರಂಡಿ ಕಲುಷಿತ ನೀರು ಹೆದ್ದಾರಿಯಲ್ಲಿ ಹರಿಯುತ್ತಿರುವುದರಿಂದ ಪ್ರಯಾಣಿಕರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದರೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅವೈಜ್ಞಾನಿಕ ಕಾಮಗಾರಿಯಿಂದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ರಸ್ತೆ, ಚರಂಡಿ, ಒಳಚರಂಡಿ, ಕುಡಿಯುವ ನೀರಿನ ಪೈಪ್‌ಗಳು ಹೊಡೆದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ದೂರಿದರು.

    ಸದಸ್ಯ ಆದಿಲ್ ಮಾತನಾಡಿ, ಇತ್ತೀಚೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಹೆದ್ದಾರಿಯಲ್ಲಿ ಒಳಚರಂಡಿ ನೀರು ಹರಿಯುತ್ತಿರುವುದರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

    ಪುರಸಭಾ ಅಧ್ಯಕ್ಷ ಸುರೇಶ್‌ಕುಮಾರ್ ಮಾತನಾಡಿ, ಈ ಸಂಬಂಧ ಜಿಲ್ಲಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

    ಎಂ.ಐ.ಪ್ರವೀಣ್ ಮಾತನಾಡಿ, ಆರೋಗ್ಯ ಸ್ಥಾಯಿ ಸಮಿತಿ ರಚನೆಯಾಗಬೇಕು. ಈ ಸಂಬಂಧ ಮುಂದಿನ ಸಭೆಯೊಳಗೆ ರಚನೆಗೆ ತಾಂತ್ರಿಕ ಸಲಹೆ ಪಡೆಯಬೇಕು ಎಂದರು.
    ಇತ್ತೀಚೆಗೆ ಸುರಿದ ಮಳೆಯಿಂದ ಪಟ್ಟಣದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗಿನ ಪೇಟೆ ಬೀದಿ ರಸ್ತೆ ಹಾನಿಯಾಗಿರುವುದರಿಂದ 10 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಭೆಯಲ್ಲಿ ಅನುಮೋದಿಸಲಾಯಿತು. ಸಭೆಯಲ್ಲಿ ಪುರಸಭಾ ಉಪಾಧ್ಯಕ್ಷೆ ಸುಮಿತ್ರಾ ರಮೇಶ್, ಪ್ರಭಾರ ಮುಖ್ಯಾಧಿಕಾರಿ ಚಂದ್ರಶೇಖರ್, ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts