More

    ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ

    ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಪಾಲಿಕೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಹಾನಗರ ಪಾಲಿಕೆ ಎಸ್‌ಸಿ, ಎಸ್‌ಟಿ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಪ್ರತ್ಯೇಕವಾಗಿ ಬುಧವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ರಾಜ್ಯ ಸರ್ಕಾರವು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಇನ್ನುಳಿದ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ತಾರತಮ್ಯ ಮಾಡಿದೆ. ಕೂಡಲೇ ಈ ಯೋಜನೆಯನ್ನು ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಹಾಗೂ ಪೌರ ಕಾರ್ಮಿರಿಗೂ ಸಹ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

    ಹಲವು ದಶಕಗಳಿಂದ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರವು ಪದೇ ಪದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಆದರೆ, ಸಮರ್ಪಕವಾಗಿ ಯೋಜನೆಗಳ ಸೌಲಭ್ಯ ಕಲ್ಪಿಸುತ್ತಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ಕಲ್ಪಿಸಿರುವ ಆರೋಗ್ಯ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸಬೇಕು. ನಾವು ಸರ್ಕಾರಿ ನೌಕರರು. ಆದರೆ, ಸರ್ಕಾರ ಮಾತ್ರ ನಮ್ಮನ್ನು ನಿರ್ಲಕ್ಷಿಸಿಕೊಂಡು ಬರುತ್ತಿದೆ ಎಂದು ದೂರಿದರು.

    ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಆರೋಗ್ಯ ಯೋಜನೆಗೆ ಒಳಪಡಿಸುವಂತೆ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರವು ನಿರ್ಲಕ್ಷಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರವು ಕೂಡಲೇ ಯೋಜನೆ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ಅಧ್ಯಕ್ಷೆ ಮಂಜುಶ್ರೀ ಎಂ., ಉಪಾಧ್ಯಕ್ಷ ಡಾ. ಗಜಾನನ ಕಾಂಬಳೆ, ಡಾ.ಸಂಜಯ ಡುಮ್ಮಗೋಳ,ಯಲ್ಲೇಶ ಬಚ್ಚಲಪುರಿ, ಸುಶಾಂತ ಕಾಂಬಳೆ, ಸಂತೋಷ ಕಾಂಬಳೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts