More

    ಎಂಎಲ್ಸಿ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ

    ಚಿತ್ರದುರ್ಗ:ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಜೂನ್ 3 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
    ಲೋಕಸಭಾ ಚುನಾವಣೆಯ ವಿವಿಧ ಸಮಿತಿಗಳು, ನಿಯೋಜಿತ ಅಧಿಕಾರಿಗಳ ತಂಡಗಳ ಕಾರ್ಯ, ಪರಿಷತ್ ಚುನಾವಣೆ ನೀತಿಸಂಹಿತೆ ಪೂರ್ಣಗೊಳ್ಳುವ ಜೂನ್ 6 ರ ವರೆಗೆ ಮುಂದುವರಿಯಲಿದೆ. ಚೆಕ್‌ಪೋಸ್ಟ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಈ ಅವಧಿ ಜಿಲ್ಲೆಯಲ್ಲಿ ನಡೆಯುವ ಹಣಕಾಸು ವಹಿವಾಟುಗಳೆಡೆ ನಿಗಾ ವಹಿಸಲಾಗುವುದು ಎಂದು ಹೇಳಿದರು.
    ಶಾಂತಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರಿದ್ದಾರೆ. 3238 ಪುರುಷ ಹಾಗೂ 1377 ಮಹಿಳಾ ಮತದಾರರು ಇದ್ದಾರೆ. ಗುರುವಾರವೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ ಎಂದರು.
    ಮೇ 16 ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. 17-ನಾಮಪತ್ರಗಳ ಪರಿಶೀಲನೆ, 20-ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನ, ಜೂನ್ 3 ರ ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ, 6 ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
    ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮತ್ತಿತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts