

ಚಿಕ್ಕಬಳ್ಳಾಪುರ: ಜ.1 ರಿಂದ ಎಸ್ಸೆಸ್ಸೆಲ್ಸಿ ತರಗತಿಗಳು ತರಗತಿಗಳು ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಶಾಲೆಗಳಲ್ಲೂ ಕರೊನಾ ಸೋಂಕು ನಿಯಂತ್ರಣದ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪಠ್ಯಕ್ರಮದ ಸಿದ್ಧತೆ, ಶಾಲೆಗಳ ಪ್ರಾರಂಭ ಸಂಬಂಧ ಗುರುವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ಕರೊನಾ ಹೊಸ ಪ್ರಕರಣಗಳು ಈಗಲೂ ವರದಿಯಾಗುತ್ತಿವೆ, ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿರ್ಲಕ್ಷ್ಯ ತೋರುವುದು ಸರಿಯಲ್ಲ. ಶಾಲೆ ಆರಂಭಕ್ಕೂ ಮೊದಲು ಕೊಠಡಿಗಳಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ ಸ್ಯಾನಿಟೈಜ್ ಮೂಲಕ ವೈರಸ್‌ಮುಕ್ತ ಪ್ರದೇಶ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದ ಜತೆಗೆ ಲೋಪಗಳಿಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸುವುದು ಆಯಾ ಶಾಲೆಗಳ ಶಿಕ್ಷಕರ ಜವಾಬ್ಧಾರಿಯಾಗಿದೆ ಎಂದು ಎಚ್ಚರಿಸಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿಯಲ್ಲಿ ಶೇ.92 ರಷ್ಟು ಲಿತಾಂಶ ಪಡೆದು, ರಾಜ್ಯದಲ್ಲಿ ಜಿಲ್ಲಾವಾರು ಪ್ರಥಮ ಸ್ಥಾನ ಪಡೆದಿತ್ತು, ಈ ಬಾರಿ ಲಿತಾಂಶ ಮತ್ತಷ್ಟು ಉತ್ತಮವಾಗಬೇಕು ಎಂದರು.
ಹಲವು ತಿಂಗಳ ಬಳಿಕ ತರಗತಿಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ ಕಾಪಾಡುವಿಕೆ, ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪ್ರೀತಿ, ವಿಶ್ವಾಸದಿಂದ ಕಾಣುವ ಜತೆಗೆ ಶಾಲೆಗಳಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಜಿಪಂ ಸಿಇಒ ಪಿ.ಶಿವಶಂಕರ್ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತೊಮ್ಮೆ ಪ್ರಥಮ ಸ್ಥಾನ ಗಳಿಸುವ ದೊಡ್ಡ ಸವಾಲು ಚಿಕ್ಕಬಳ್ಳಾಪುರ ಜಿಲ್ಲೆ ಮುಂದಿದೆ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಪಾಲಕರು ಬದ್ಧತೆಯಿಂದ ಗುರಿ ಸಾಧಿಸಲು ಶ್ರಮಿಸಿದಾಗ ಮಾತ್ರ ಗೌರವ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಕರಿಗೆ, ಕರೊನಾ ಟೆಸ್ಟ್ : ಡಿ.28, 29ರೊಳಗೆ ಕರೊನಾ ಪರೀಕ್ಷೆ ಮಾಡಿಸಿಕೊಂಡ ನಂತರವಷ್ಟೇ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸೂಚಿಸಲಾಯಿತು. ಶಿಕ್ಷಕರು ಸಹ ಕಡ್ಡಾಯವಾಗಿ ಟೆಸ್ಟ್ ಮಾಡಿಸಿಕೊಳ್ಳಬೇಕು. ನೆಗೆಟೀವ್ ಬಂದವರಿಗೆ ಮಾತ್ರ ಶಾಲೆಗೆ ಹಾಜರಾಗಲು ಅವಕಾಶ ನೀಡಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜತೆಗೆ ಪರಸ್ಪರ ಅಂತರ ಕಾಪಾಡಿಕೊಳ್ಳುವುದು, ಪಾಲಕರಿಂದ ಒಪ್ಪಿಗೆ ಪತ್ರ ಪಡೆಯುವುದು ಸೇರಿ ಎಸ್‌ಒಪಿ ಮಾರ್ಗಸೂಚಿಗಳನ್ನು ಪಾಲಿಸುವ ಕುರಿತು ಚರ್ಚಿಸಲಾಯಿತು. ಇದೇ ವೇಳೆ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಇಲಾಖೆ ರೂಪಿಸಿರುವ ವಿಷಯವಾರು ಸ್ಟಡಿ ಪ್ಯಾಕೇಜ್‌ನ ಬಗ್ಗೆ ತಜ್ಞರು ವಿಷಯ ಮಂಡಿಸಿದರು.