More

    ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

    ಗದಗ: ಜೂ. 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ನಕಲುಮುಕ್ತವಾಗಿ ಮಾಡಲು ಹಾಗೂ ಕರೊನಾ ವೈರಸ್ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

    ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 13,934 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 58 ಪರೀಕ್ಷಾ ಕೇಂದ್ರಗಳಲ್ಲಿ 600 ಕೊಠಡಿಗಳನ್ನು ಗುರುತಿಸಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಪಕ್ಕದಲ್ಲಿಯೇ ಹೆಚ್ಚುವರಿಯಾಗಿ 7 ಉಪಕೇಂದ್ರಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 50ರಿಂದ 70 ಹೆಚ್ಚುವರಿ ಕೊಠಡಿಗಳನ್ನು ಗುರುತಿಸಲಾಗುತ್ತಿದೆ.

    ಈ ಮೊದಲು ಪರೀಕ್ಷಾ ಕೇಂದ್ರಗಳಲ್ಲಿನ ಕೊಠಡಿಗಳ ವ್ಯವಸ್ಥೆಯಂತೆ ಒಂದು ಡೆಸ್ಕ್​ಗೆ ಒಬ್ಬರು ಅಥವಾ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ ಬರೆಸಲಾಗುತ್ತಿತ್ತು. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಇದೀಗ ಕರೊನಾ ತಡೆಗಟ್ಟಲು ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಒಂದು ಡೆಸ್ಕ್​ಗೆ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಕೂರಿಸಲಾಗುತ್ತಿದೆ. ಅಂದರೆ ಒಂದು ಕೊಠಡಿಗೆ ಕೇವಲ 20 ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಸಲಾಗುತ್ತಿದೆ.

    ಕರೊನಾ ಭೀತಿಯಿರುವ ಈ ಸಮಯದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮುಖ್ಯವಾಗಿ ಪರೀಕ್ಷಾರ್ಥಿಗಳಿಗೆ ಮೂಲಸೌಕರ್ಯ, ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕರೊನಾ ಹರಡದಂತೆ ತಡೆಯಲು ಪ್ರತಿ ಕೇಂದ್ರಗಳಲ್ಲಿಯೂ ನೀರು, ಸ್ಯಾನಿಟೈಸರ್ ವ್ಯವಸ್ಥೆ ಇರಲಿದೆ. ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ವಿವರಿಸಿದರು.

    ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ವಸತಿ ಶಾಲೆ, ವಸತಿ ನಿಲಯಗಳಲ್ಲಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮರಳು ಊರಿಗೆ ಹೋಗಿದ್ದಾರೆ. ಅಲ್ಲದೆ, ಕೆಲ ವಸತಿ ಶಾಲೆ, ವಸತಿ ನಿಲಯಗಳನ್ನು ಈಗ ಕ್ವಾರಂಟೈನ್ ಕೇಂದ್ರಗಳನ್ನಾಗಿಸಿಕೊಳ್ಳಲಾಗಿದೆ. ಹೀಗಾಗಿ ಅಲ್ಲಿನ ವಿದ್ಯಾರ್ಥಿಗಳು ತಾವು ವಾಸವಿರುವ ಸ್ಥಳದ ಸಮೀಪದಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಅರಸಿ ರಾಜ್ಯದ ವಿವಿಧೆಡೆ ತೆರಳಿದ್ದವರು ಈಗ ತಮ್ಮ ಸ್ವಂತ ಗ್ರಾಮಗಳಿಗೆ ವಾಪಸಾಗಿದ್ದಾರೆ. ಅಂತಹವರ ಮಕ್ಕಳು ಅಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಕಟ್ಟಿದ್ದರು. ಆ ಮಕ್ಕಳೂ ಸದ್ಯ ವಾಸವಿರುವ ಸ್ಥಳದ ಸಮೀಪದ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದು ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.

    ಮಕ್ಕಳಿಗೆ ಆನ್​ಲೈನ್ ಪಾಠ

    ಲಾಕ್​ಡೌನ್ ಅವಧಿಯಲ್ಲಿ ಜಿಲ್ಲಾ ಶಿಕ್ಷಣ ಇಲಾಖೆ ನುರಿತ ಶಿಕ್ಷಕರಿಂದ ಆನ್​ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡುವುದರ ಜತೆಗೆ ಮಾರ್ಗದರ್ಶನವನ್ನು ಮಾಡಿದ್ದಾರೆ. ವಿಷಯವಾರು ಶಿಕ್ಷಕರ ವಾಟ್ಸ್ ಆಪ್ ಗ್ರೂಪ್ ಮಾಡಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕಳಿಸಿ ಅವುಗಳನ್ನು ಬಿಡಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ, ಸೌಲಭ್ಯ ಇಲ್ಲದ ಗ್ರಾಮೀಣ ಮಕ್ಕಳಗೆ ಶಾಲೆಯಲ್ಲಿಯೇ ಓದಿನಮನೆ ಎಂಬ ವಿಶೇಷ ತರಗತಿ ಆರಂಭಿಸಿ ಪಾಠ ಮಾಡಲಾಗಿದೆ. ಪ್ರತಿ ತಿಂಗಳಿಗೊಮ್ಮೆ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಸಾಮರ್ಥ್ಯ ಅರಿತುಕೊಳ್ಳಲಾಗಿದೆ. ಈ ವರ್ಷ ಜಿಲ್ಲೆಯಿಂದ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪರೀಕ್ಷೆ ನಡೆಯುವ ಒಟ್ಟು 600 ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ, 7 ಉಪಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಬೇರೆ ಕಡೆಯಿಂದ ವಲಸೆ ಬಂದವರು, ವಸತಿ ನಿಲಯಗಳಲ್ಲಿದ್ದವರು ಇಚ್ಛಿಸಿದಲ್ಲಿ ಅವರ ವಾಸ್ತವ್ಯ ಸ್ಥಳದ ಸಮೀಪದ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 29ರವರೆಗೆ ಅವಕಾಶವಿದ್ದು, ಈ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿ ಕೊಠಡಿಗಳ ವ್ಯವಸ್ಥೆ ಮಾಡಲಾಗುವುದು.

    | ಎನ್.ಎಚ್. ನಾಗೂರ, ಡಿಡಿಪಿಐ ಗದಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts