More

    ಕರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ

    ಕೋಲಾರ: ಜಿಲ್ಲೆಯಲ್ಲಿ ಕರೊನಾ ಪ್ರಕರಣ ನಿಯಂತ್ರಿಸಲು ಜಿಲ್ಲಾಡಳಿತವು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದು, ಎಲ್ಲ ಅಧಿಕಾರಿಗಳ ಕಾರ್ಯವೈಖರಿಯಿಂದ ಬಹುಮಟ್ಟಿಗೆ ನಿಯಂತ್ರಣ ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕರೊನಾ ನಿಯಂತ್ರಣ ಸಭೆಯಲ್ಲಿ ಮಾತನಾಡಿ, ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರದಲ್ಲಿ ಕರೊನಾದಿಂದ ಮೃತಪಟ್ಟವರ ಪ್ರಮಾಣ ಕಡಿಮೆ ಇದೆ. ಅಧಿಕಾರಿಗಳ ಶ್ರಮದಿಂದ ಇದು ಸಾಧ್ಯವಾಯಿತು ಎಂದರು.

    ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಯನ್ನು ಪೂರ್ಣಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆಯಾಗಿ ಮಾಡಿರುವುದರಿಂದ ಕೊರತೆ ನೀಗಿಸಲು ಅವಶ್ಯಕವಿರುವ ಉಪಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಶಾಸಕ ಕೆ.ಆರ್. ರಮೇಶ್‌ಕುಮಾರ್ ಮಾತನಾಡಿ, ಕರೊನಾ ಲಕ್ಷಣಗಳಿಲ್ಲದ ರೋಗಿಗಳು ಆಸ್ಪತ್ರೆಗೆ ಬಂದಾಗ ಕಡ್ಡಾಯವಾಗಿ ಕರೊನಾ ಪರೀಕ್ಷೆಗೆ ವೈದ್ಯರು ಒತ್ತಡ ಹೇರುತ್ತಿರುವುದು ಸರಿಯಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.

    ಆಸ್ಪತ್ರೆಗಳಲ್ಲಿ ಮೃತರಾದವರ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಬಿಲ್ ಪಾವತಿಸಲು ಒತ್ತಾಯಿಸುವುದನ್ನು ತಪ್ಪಿಸಲು ಶಾಸನ ಮಾಡಿದ್ದರೂ ಪಾಲಿಸುವಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಎಮ್ಮೆಲ್ಸಿ ನಸೀರ್ ಅಹ್ಮದ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದಲ್ಲಿ ಕರೊನಾ ಸೇರಿ ಇತರ ಕಾರಣದಿಂದ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ. ಸಮುದಾಯದವರು ಹೆಚ್ಚಿರುವ ಕಡೆ ಪರೀಕ್ಷಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ಕೋವಿಡ್ ಅಲ್ಲದ ರೋಗಿಗಳಿಗೆ ಪ್ರತ್ಯೇಕವಾಗಿ 100 ಹಾಸಿಗೆ ಮೀಸಲಿಡಬೇಕು ಎಂದರು.

    ಡಿಸಿ ಸಿ.ಸತ್ಯಭಾಮ ಮಾತನಾಡಿ, ಕರೊನಾ ಸೋಂಕಿಗೆ ತುತ್ತಾದ ವ್ಯಕ್ತಿಯ ಮನೆಯ ಪ್ರದೇಶವನ್ನು ಕಂಟೇಮೆಂಟ್ ವಲಯವನ್ನಾಗಿ ಪರಿವರ್ತಿಸಲಾಗುತ್ತದೆ. ಈ ವಲಯಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಬರುವುದಿಲ್ಲ ಎಂದರು.

    ಶಾಸಕ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಗೋವಿಂದ ರಾಜು, ಜಿಪಂ. ಅಧ್ಯಕ್ಷ ಸಿ.ಎಸ್. ವೆಂಕಟೇಶ್, ಎಸ್ಪಿ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್ ಎಸ್ಪಿ ಇಲಕಿಯಾ ಕರುಣಾಕರನ್, ಎಡಿಸಿ ಬಿ.ಶಿವಸ್ವಾಮಿ, ಎಸಿ ಸೋಮಶೇಖರ್, ಡಿಎಚ್‌ಒ ಡಾ.ಎಸ್.ಎನ್.ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಜಿ.ನಾರಾಯಣಸ್ವಾಮಿ, ಜಿಪಂ. ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts