More

    ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

    ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿ ಇರುವುದರಿಂದ ಪ್ರತಿ ಇಲಾಖೆಯೂ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ವಾಪಸ್ ಹೋಗದಂತೆೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, 15ನೇ ಹಣಕಾಸು ಯೋಜನಯಡಿ ಅನುದಾನದ ಕಾಮಗಾರಿ ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

    ಅಮೃತ ಗ್ರಾಮ ಪಂಚಾಯಿತಿ ಮೊದಲ ಹಂತದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯಕ್ಕೆ ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ಮುಂಬರುವ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಅಮೃತ್ ಸರೋವರ ಕಾಮಗಾರಿಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಮೊದಲು ಗ್ರಂಥಾಲಯ ಸ್ಥಾಪಿಸಬೇಕು. ನಂತರ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲೆಯ ಆರೋಗ್ಯ ಸೌಲಭ್ಯಗಳು ಮತ್ತು 23 ತಜ್ಞ ವೈದ್ಯರ ಕೊರತೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಅವರು, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ತಜ್ಞ ವೈದ್ಯರ ಕೊರತೆ ನೀಗಿಸಲಾಗುವುದು ಎಂದ ಅವರು, ಕೇರಳ ರಾಜ್ಯದ ಮಾದರಿಯಲ್ಲಿ ಶಿಶು ಮರಣ ಹಾಗೂ 1-5 ವಯಸ್ಸಿನ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿ ಕ್ರಿಯಾಯೋಜನೆ ರೂಪಿಸುವಂತೆ ತಿಳಿಸಿದರು.

    ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದರ ಜತೆಗೆ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಬೇಕು. ಆದಾಯ ತೆರಿಗೆ ಪಾವತಿಸುವಂತಹ ವ್ಯಕ್ತಿಗಳ ಬಿಪಿಎಲ್ ಕಾರ್ಡ್ ಸೇರಿದಂತೆ ಇತರ ಮಾರ್ಗಸೂಚಿ ಅನುಸರಿಸಿ ಅನರ್ಹ ಕಾರ್ಡ್ ರದ್ದುಗೊಳಿಸಬೇಕು ಎಂದರು.

    ಅಧಿವೇಶನಕ್ಕೆ ಕೆಲವೇ ದಿನಗಳು ಉಳಿದಿರುವುದರಿಂದ ವಸತಿ, ಊಟೋಪಾಹಾರ, ಸಾರಿಗೆ, ಕಂಪ್ಯೂಟರ್ ಅಳವಡಿಕೆ, ಅಂತರ್ಜಾಲ ಸಂಪರ್ಕ ಸೇರಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅತೀಕ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಜಿಪಂ ಸಿಇಒ ದರ್ಶನ್ ಎಚ್.ವಿ., ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಸ್ಮಾರ್ಟ್ ಸಿಟಿ ಎಂಡಿ ಡಾ.ಪ್ರವೀಣ ಬಾಗೇವಾಡಿ, ಡಿಸಿಪಿ ರವೀಂದ್ರ ಗಡಾದಿ, ಈಶ್ವರ ಉಳ್ಳಾಗಡ್ಡಿ, ಡಿಎಚ್‌ಒ ಡಾ.ಮಹೇಶ ಕೋಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಹೊಸಮನಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಸೊಬರದ ಇದ್ದರು.

    ಶಾಲಾ ವಾಹನ ಸುರಕ್ಷತೆ ನಿಗಾವಹಿಸಿ

    ಶಾಲಾ ವಾಹನಗಳಲ್ಲಿ ಮಿತಿಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿರುವುದರಿಂದ ಅಪಘಾತ ಸಂಭವಿಸುತ್ತಿವೆ. ಈ ಬಗ್ಗೆ ಶಾಲಾಮಟ್ಟದಲ್ಲಿ ಸುರಕ್ಷತಾ ಸಮಿತಿ ರಚಿಸಿಕೊಂಡು ನಿರಂತರವಾಗಿ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲೆಗಳಲ್ಲಿ ಶೌಚಗೃಹ ನಿರ್ಮಾಣಕ್ಕೆ ಜಿಪಂ ಹಾಗೂ ನರೇಗಾ ಯೋಜನೆಯಡಿ ಎಲ್ಲ ನೆರವು ನೀಡಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾದ ಶೌಚಗೃಹ ನಿರ್ವಹಣೆಗೆ ಆಯಾ ಶಾಲಾ ಮಂಡಳಿ ಅಥವಾ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮ ವಹಿಸಬೇಕು. ಪ್ರತಿ ಶಾಲೆಯಲ್ಲಿ ಮೂಲ ಸೌಕರ್ಯ ಇರುವಂತೆ ನೋಡಿಕೊಳ್ಳುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ. ಮಕ್ಕಳಿಗೆ ಪಠ್ಯಕ್ರಮದ ಜತೆಗೆ ಸ್ವಚ್ಛತೆ, ಶೌಚಗೃಹ ಬಳಕೆ ಹಾಗೂ ಇತರ ನಾಗರಿಕ ಜವಾಬ್ದಾರಿ ತಿಳಿಸಿಕೊಡಬೇಕು. ಯಾವುದೇ ಕಟ್ಟಡ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ, ಅವುಗಳ ನಿರ್ವಹಣೆ ದೊಡ್ಡ ಸವಾಲಾಗಿದೆ ಎಂದು ಎಲ್.ಕೆ.ಅತೀಕ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts