More

    ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾವಹಿಸಿ

    ಬಾಗಲಕೋಟೆ: ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಬರ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಎಲ್ಲಿ ಅಗತ್ಯವಿದೆಯೋ ಅಂತಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯವಾಗಬೇಕು. ಅಗತ್ಯ ಬಿದ್ದಲ್ಲಿ ಖಾಸಗಿ ಬೊರವೆಲಗಳ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಿಲು ತಿಳಿಸಿದರು.

    ಟ್ಯಾಂಕರುಗಳ ಮೂಲಕ ನೀರು ಸರಬರಾಜು ಮಾಡುವಲ್ಲಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸಮರ್ಪಕ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಟ್ಯಾಂಕರ ಮೂಲಕ ನೀರು ಸರಬರಾಜು ಮಾಡಿದ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಲು ಕ್ರಮ ವಹಿಸಬೇಕು. ತಾಲೂಕಾ ವ್ಯಾಪ್ತಿಯಲ್ಲಿ ತಹಶಿಲ್ದಾರರ ಪಾತ್ರ ಅತೀ ಪ್ರಮುಖವಾಗಿದ್ದು, ಬರ ನಿರ್ವಹಣೆಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜತೆ ಸಮನ್ವಯ ಸಭೆ ನಡೆಸುವ ಮೂಲಕ ಕುಡಿಯುವ ನೀರು ಹಾಗೂ ಮೇವಿನ ಕೊರತೆಯ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.

    ಮುಖ್ಯವಾಗಿ ನೀರಿನ ಪೂರೈಕೆಯಲ್ಲಿ ವ್ಯತ್ಯವಯವಾಗದಂತೆ ನಿಗಾವಹಿಸಿ ಈ ಕುರಿತು ಯಾವುದೇ ದೂರುಗಳು ಬಾರದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸದ್ಯ ಮೇವಿನ ಕೊರತೆ ಇರುವುದಿಲ್ಲ. ಮೇವು ಬೇಡಿಕೆ ಇರುವ ಕಡೆಗಳಲ್ಲಿ ಸ್ಥಳೀಯ ಬೇಡಿಕೆಯ ಅನುಸಾರ ಪಶುಪಾಲನಾ ಇಲಾಖೆಯ ಅಧಿಕಾರಿಗಳ ವರದಿ ಆಧರಿಸಿ ಮೇವು ಪೂರೈಕೆ ಮಾಡಲು ತಹಶೀಲ್ದಾರರಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಸಂತೋಷ ಕಾಮಗೌಡ ಸೇರಿದಂತೆ ಬರ ನಿರ್ವಹಣೆಯ ತಾಲೂಕಾ ನೋಡಲ್ ಅಧಿಕಾರಿಗಳು, ಆಯಾ ತಾಲೂಕಿನ ತಹಶಿಲ್ದಾರರು ವಿಡಿಯೋ ಕಾನ್ಪರೇನ್ಸ್ ಮೂಲಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts